
ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ರೂಪಿಸಲಾದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ (SCSP-TSP) ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗುವ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಬುಧವಾರ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 2025-26ನೆ ಸಾಲಿನ ‘ಕ್ರಿಯಾ ಯೋಜನೆ’ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಪರಿಶಿಷ್ಟರ ಬದುಕಲ್ಲಿ ಬದಲಾವಣೆ ತರಲು ಸಾಧ್ಯವಾಗಿಲ್ಲ. ಅಲ್ಲದೆ, ಪರಿಶಿಷ್ಟರ ಕಲ್ಯಾಣ ಯೋಜನೆಗಳ ಅನುಷ್ಟಾನದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ಪರಿಶಿಷ್ಟರ ಯೋಜನೆಗಳ ಅನುಷ್ಟಾನಕ್ಕೆ ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ಕೃಷಿ, ನೀರಾವರಿ, ವಸತಿ, ಕೈಗಾರಿಕೆ, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಂಧನ, ಸಾರಿಗೆ, ರೇಷ್ಮೆ, ಸಮಾಜ ಕಲ್ಯಾಣ, ಉನ್ನತ ಶಿಕ್ಷಣ ಸೇರಿದಂತೆ 34 ಇಲಾಖೆಗಳು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಸಚಿವರು, ಗ್ಯಾರಂಟಿ ಯೋಜನೆಗಳು ಪರಿಶಿಷ್ಟ ಸಮುದಾಯಗಳ ಅದರಲ್ಲೂ ಪರಿಶಿಷ್ಟ ಮಹಿಳೆಯರ ಬದುಕಲ್ಲಿ ಆಗಿರುವ ಗುಣಾತ್ಮಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಗಿರುವ ಬದಲಾವಣೆಯ ಕುರಿತಾಗಿ ನಿಖರವಾದ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ರಾಜ್ಯದಲ್ಲಿನ ಮಾಜಿ ದೇವದಾಸಿ ಮಹಿಳೆಯರ ಕುಟುಂಬದ ಶಿಕ್ಷಣ, ಆರೋಗ್ಯ ಮತ್ತು ಔದ್ಯೋಗಿಕ ಅವಕಾಶಗಳಿಗೆ ಸಂಬಂಧಿಸಿದಂತೆ ಹಾಗೂ ವಸತಿ ಶಾಲೆಗಳಲ್ಲಿನ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಹಾಡಿಗಳಲ್ಲಿ ವಾಸ ಮಾಡುವ ಜನರಿಗೆ ಭೂ ಮಂಜೂರಾತಿ ಮಾಡಲಾಗಿದ್ದು, ಅವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಅಧಿಕಾರಿಗಳು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಪರಿಶಿಷ್ಟರಿಗೆ ನೀಡುವ ಸೌಲಭ್ಯದ ಕುರಿತ ನಿಖರ ದತ್ತಾಂಶವನ್ನು ಸಂಗ್ರಹಿಸಿ, ಆ ದತ್ತಾಂಶದ ಪ್ರತಿಯ ಮೇಲೆ ತಮ್ಮ ಸಹಿ ಹಾಕಿ, ಅದನ್ನು ಧೃಢೀಕರಿಸಬೇಕು ಎಂದ ಅವರು, ರಾಜ್ಯದಲ್ಲಿನ ಪರಿಶಿಷ್ಟ ಸಮುದಾಯದ ಜನರ ವಸತಿ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ನೀಡಬೇಕು ಎಂದು ಸಲಹೆ ನೀಡಿದರು.
Advertisement