ಮೈಸೂರು, ಬನ್ನೇರುಘಟ್ಟ ಮೃಗಾಲಯ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ..!

ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟದ ಮೃಗಾಲಯಗಳಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸುವಂತೆ ಪ್ರಾಧಿಕಾರ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
mysuru Zoo
ಮೈಸೂರು ಮೃಗಾಲಯ
Updated on

ಬೆಂಗಳೂರು: ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪಶು-ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಫಾರಿ ದರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಈ ತೆಗೆದುಕೊಳ್ಳಲಾಯಿತು.

ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟದ ಮೃಗಾಲಯಗಳಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸುವಂತೆ ಪ್ರಾಧಿಕಾರ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಅದಕ್ಕೆ ಸಚಿವ ಈಶ್ವ‌ ಖಂಡ್ರೆ, ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಅದರಿಂದ ಪ್ರವಾಸಿಗರಿಗೆ ಹೊರೆಯಾಗುತ್ತದೆ. ಹೀಗಾಗಿ ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸುವಂತೆ ಸೂಚಿಸಿದರು.

ಅದರ ಆಧಾರದಲ್ಲಿ ಶೇ.20ರಷ್ಟು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಅನುಮೋದಿಸಲಾಯಿತು. ಅಲ್ಲದೆ, ಸಫಾರಿ ದರ ಹೆಚ್ಚಿಸದಂತೆಯೂ ನಿರ್ಣಯಿಸಲಾಯಿತು.

ಇನ್ನು ಸಭೆಯಲ್ಲಿ ಸಚಿವರು, ಪ್ರವಾಸಿಗರಿಗೆ ಮೃಗಾಲಯ ಮತ್ತು ಜೈವಿಕ ಉದ್ಯಾನಗಳಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಸುಸಜ್ಜಿತ ಶೌಚಾಲಯಗಳ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸಚಿವರು ಸೂಚಿಸಿದರು. ಅಲ್ಲದೆ, ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

mysuru Zoo
ಮೃಗಾಲಯ ದಿನ: ಬನ್ನೇರುಘಟ್ಟ ಜೈವಿಕ ಉದ್ಯಾನವನದ ಮಾವುತ, ಕರಡಿ ಪಾಲಕ ಸೇರಿ 6 ಮಂದಿಗೆ ಸನ್ಮಾನ

ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿದರೆ ಮತ್ತು ಹೊಸ ವನ್ಯಜೀವಿಗಳನ್ನು ಸೇರ್ಪಡೆಗೊಳಿಸಿದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ ಎಂದು ಖಂಡ್ರೆ ಅಭಿಪ್ರಾಯಪಟ್ಟರು. ಈ ನಿಟ್ಟಿನಲ್ಲಿ ವಿದೇಶೀ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸುವಂತೆ ಸೂಚಿಸಿದರು.

ಮುಂದಿನ ಐದು ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು-ವೆಚ್ಚಗಳನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲು ಸಹ ಸಚಿವರು ನಿರ್ದೇಶನ ನೀಡಿದರು.

ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ನಿರ್ದೇಶನ ನೀಡಿದರು.

ಇದರ ಜೊತೆಗೆ, ಬೀದರ್‌ನಲ್ಲಿ ವಿದೇಶೀ ಹಕ್ಕಿ-ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಗಣಿ ಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆ.ಎಂ.ಇ.ಆರ್.ಸಿ. ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆಯೂ ತಿಳಿಸಿದ ಸಚಿವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com