
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.
ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.
ಈ ಜಾಹೀರಾತಿನಿಂದ ಪಕ್ಷದ ಗೌರವಕ್ಕೆ ದಕ್ಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಿತ್ತು.
Advertisement