ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಇಂದು ಬೆಳಿಗ್ಗೆ ಮಲ್ಲೇಶ್ವರದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಬಿ. ಸರೋಜಾದೇವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ್ದ ಸರೋಜಾ ದೇವಿ 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದಿದ್ದರು. ಇಂದು ಮಲ್ಲೇಶ್ವರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಸರೋಜಾದೇವಿ ಅವರ ಹುಟ್ಟೂರು ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಸೋಮವಾರ ಬಂಧಿಸಿದ್ದಾರೆ. ಬಂಧನದ ಬೆನ್ನಲ್ಲೇ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಬೆಳವಣಿಗೆ ಸಂಬಂಧ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಬಿಜೆಪಿ, ಕಣ್ಣಿ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರು ಎಂದು ಹೇಳಿದೆ. ಮಾದಕ ದ್ರವ್ಯ ಚಟುವಟಿಕೆಗಳಲ್ಲಿ ಸಚಿವರೊಬ್ಬರ ಆಪ್ತರು ಮತ್ತು ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕನ ಬಂಧನವು ಕಾಂಗ್ರೆಸ್ ಪಕ್ಷದ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ" ಎಂದು ಬಿಜೆಪಿ ಆರೋಪಿಸಿದೆ. ಡ್ರಗ್ಸ್ ವ್ಯಾಪಾರಿಗಳನ್ನು ನಿಮ್ಮ ಆಪ್ತ ವಲಯದಲ್ಲಿ ಇಟ್ಟುಕೊಳ್ಳಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಉದ್ಘಾಟಿಸಿದರು. ಈ ಸೇತುವೆಯನ್ನು 472 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಸೇತುವೆಯು 2.44 ಕಿಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. ಈ ಸೇತುವೆಯು ಸಾಗರದಿಂದ ಸಿಗಂದೂರಿನ ಸುತ್ತಮುತ್ತಲಿನ ಹಳ್ಳಿಗಳಿಗೆ ದೂರವನ್ನು ಕಡಿಮೆ ಮಾಡುತ್ತದೆ. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಅವರ ಯಾವುದೇ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ, ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಹೇಳಿದ್ದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಿಎಂ ಇಂದು ಮಹಿಳೆಯೊಬ್ಬರಿಗೆ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ನ್ನು ವಿತರಿಸಿ, ಸನ್ಮಾನಿಸಿದರು. ಈ ವೇಳೆ ಬಸ್ ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಣೆ ಮಾಡಲಾಯಿತು. ಇದೇ ವೇಳೆ ಶಕ್ತಿ ಯೋಜನೇಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು. ಟಿಕೆಟ್ ವಿತರಿಸಿದ ನಂತರ ಮಾತನಾಡಿದ ಸಿಎಂ, ಡಿನ ಹೆಣ್ಣುಮಕ್ಕಳು ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.
ಬೀದಿ ನಾಯಿಗಳಿಗೆ ಮಾಂಸಾಹಾರ ಊಟ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನಿರ್ಧಾರ ಭಾರೀ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿದ್ದು, ಈ ವಿಚಾರವಾಗಿ ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಪಾಲಿಕೆಯ ಪಶುಪಾಲನಾ ವಿಭಾಗದಿಂದ ಬೀದಿ ನಾಯಿಗಳಿಗೆ ಆಹಾರ ನೀಡುವ ಸಲುವಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿದೆ. ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆ ಹೊಸ ಕಾರ್ಯಕ್ರಮವಲ್ಲ. ಕೋವಿಡ್ ಸಮಯದಲ್ಲಿ ಪಾಲಿಕೆಯು ಆಹಾರ ನೀಡುವಿಕೆಯನ್ನು, ಕೈಗೆತ್ತಿಕೊಂಡಿತ್ತು. ಆ ಚಟುವಟಿಕೆಯ ಮುಂದುವರಿಕೆಯಾಗಿ, ಕಳೆದ ವರ್ಷವೂ ನಿಗದಿತ ಸಂಖ್ಯೆಯಲ್ಲಿ ನಾಯಿಗಳ ಆಹಾರ ನೀಡಲಾಗಿತ್ತು ಎಂದು ಬಿಬಿಎಂಪಿ ಹೇಳಿದೆ.
Advertisement