
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್ ಅವಧಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಒಂಬತ್ತು ಆರೋಗ್ಯ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಲಾಗಿದೆ.
ರಾಜ್ಯ ಸರ್ಕಾರ ಕೋವಿಡ್ ಅಕ್ರಮಗಳ ಕುರಿತು ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಕುನ್ನಾ ಸಮಿತಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಮಧ್ಯಂತರ ವರದಿ ಆಧರಿಸಿ, ಕೋವಿಡ್ ಅವಧಿಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ 28 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.
ಬಿಬಿಎಂಪಿ ಎಂಜಿನಿಯರ್, ವೈದ್ಯರು ಮತ್ತು ಹಣಕಾಸು ವಿಭಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ಈ ನೋಟಿಸ್ ಸ್ವೀಕರಿಸಿದ ನಂತರ, 28 ಅಧಿಕಾರಿಗಳು ದಾಖಲೆಗಳೊಂದಿಗೆ ಪ್ರತಿಕ್ರಿಯೆ ಸಲ್ಲಿಸಿದ್ದಾರೆ
ಅಧಿಕಾರಿಗಳು ನೀಡಿದ ಉತ್ತರಗಳನ್ನು ಪರಿಶೀಲಿಸಿದ ನಂತರ, 19 ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆದಾಗ್ಯೂ, ಇಲಾಖೆಯು ಉಳಿದ ಒಂಬತ್ತು ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ವಿರುದ್ಧ ಇಲಾಖೆ ತನಿಖೆಗೆ ಆದೇಶಿಸಿದೆ.
"ಈ ಅಧಿಕಾರಿಗಳು ಬಿಬಿಎಂಪಿ ಆರೋಗ್ಯ ಇಲಾಖೆಯ ವೆಚ್ಚ ಮತ್ತು ಬಿಲ್‌ಗಳ ಬಗ್ಗೆ ಸ್ಪಷ್ಟನೆ ನೀಡಲು ವಿಫಲರಾಗಿದ್ದಾರೆ. ಆದ್ದರಿಂದ ಈ ವಿಷಯವನ್ನು ಬಿಬಿಎಂಪಿ ಆಡಳಿತ ಇಲಾಖೆಗೆ, ಇಲಾಖಾ ತನಿಖೆಗಾಗಿ ವರ್ಗಾಯಿಸಲಾಗಿದೆ. ಇಲಾಖಾ ತನಿಖೆಯ ಸಮಯದಲ್ಲಿ ಈ ಅಧಿಕಾರಿಗಳು ಅನುಮಾನಗಳನ್ನು ಸ್ಪಷ್ಟಪಡಿಸಲು ವಿಫಲವಾದರೆ, ಕ್ರಮ ಕೈಗೊಳ್ಳಲಾಗುವುದು" ಎಂದು ಮುಖ್ಯ ಆರೋಗ್ಯ ಅಧಿಕಾರಿ ಸಿರಾಜುದ್ದೀನ್ ಮದನಿ ಅವರು ತಿಳಿಸಿದ್ದಾರೆ.
ಅಲ್ಲದೆ, ಕೋವಿಡ್ ಅವಧಿಯಲ್ಲಿ ಸಾಮಗ್ರಿಗಳನ್ನು ಪೂರೈಸಿದ 15 ಖಾಸಗಿ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ. 15 ಖಾಸಗಿ ಕಂಪನಿಗಳಿಗೆ ಹೆಚ್ಚುವರಿಯಾಗಿ ನೀಡಲಾದ 13 ಕೋಟಿ ರೂ.ಗಳನ್ನು ವಸೂಲಿ ಮಾಡಲು ಸಮಿತಿ ಸೂಚಿಸಿದೆ.
Advertisement