
ಬೆಂಗಳೂರು: ಜೂನ್ 4 ರಂದು 11 RCB ಅಭಿಮಾನಿಗಳ ಸಾವಿಗೆ ಕಾರಣವಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಏಕವ್ಯಕ್ತಿ ತನಿಖಾ ಆಯೋಗದ ತನಿಖಾ ವರದಿಯನ್ನು ಗುರುವಾರ ರಾಜ್ಯ ಸಚಿವ ಸಂಪುಟದ ಮುಂದೆ ಇಡಲಾಗಿದ್ದು, ಮುಂದಿನ ಸಭೆಯಲ್ಲಿ ಅದರ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್ ಅವರು, "ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಸಂಪುಟ ಸ್ವೀಕರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ನಾವು ಇದನ್ನು ಅಧ್ಯಯನ ಮಾಡಿ ಚರ್ಚಿಸುತ್ತೇವೆ ಮತ್ತು ನಂತರದ ನಿರ್ಧಾರಗಳನ್ನು ನಿಮಗೆ (ಮಾಧ್ಯಮಕ್ಕೆ) ತಿಳಿಸುತ್ತೇವೆ" ಎಂದರು.
"ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಾವು ಅದನ್ನು ಕೊನೆಯ ವಿಷಯವಾಗಿ ತೆಗೆದುಕೊಂಡಿದ್ದೇವೆ. ವರದಿಯ ಬಗ್ಗೆ ಅಧ್ಯಯನ ಮಾಡಬೇಕು. ಹೀಗಾಗಿ ಮುಂದಿನ ಸಭೆಯಲ್ಲಿ ನಾವು ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ" ಎಂದರು.
ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಅದನ್ನು ಸಲ್ಲಿಸಬೇಕಾದಾಗಲೆಲ್ಲಾ ನಾವು ಅದನ್ನು ಸಲ್ಲಿಸುತ್ತೇವೆ" ಎಂದು ಹೇಳಿದರು.
ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಆಯೋಗವು ಜುಲೈ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಸಂಪುಟಗಳ ವರದಿ ಸಲ್ಲಿಸಿದೆ.
Advertisement