ತೆಲಂಗಾಣ ಮಾದರಿ ಜಾತಿ ಜನಗಣತಿ ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ OBC ಮಂಡಳಿ ಒತ್ತಾಯ

ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಅವರಿಗೆ ಬಲ ತುಂಬುವ ಕುರಿತು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಮೇಲೆ ಯಾವೆಲ್ಲ ವಿಚಾರಗಳ ಕುರಿತು ಒತ್ತಡ ಹೇರಬೇಕು ಎಂಬ ಕುರಿತು ವಿಕೃತ ಚರ್ಚೆ ನಡೆದಿದೆ.
CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಆಧಾರಿತ ಜನಗಣತಿಗೆ ತೆಲಂಗಾಣ ಮಾದರಿ ಅನುಸರಿಸುವುದು, ಶಿಕ್ಷಣ, ರಾಜಕೀಯ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಶೇ.50ರಿಂದ 75ಕ್ಕೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ, ಎಲ್ಲ ರಾಜ್ಯಗಳ ರಾಜಧಾನಿಯಲ್ಲಿ ರ್ಯಾಲಿ ನಡೆಸುವುದು ಸೇರಿ ಇನ್ನಿತರ ವಿಷಯಗಳ ಕುರಿತು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಖಾಸಗಿ ಹೋಟೆಲ್‌ನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ 2ನೇ ದಿನದ ಸಭೆಯಲ್ಲಿ ಒಬಿಸಿ ಸಮುದಾಯದವನ್ನು ಒಗ್ಗೂಡಿಸುವುದು, ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಅವರಿಗೆ ಬಲ ತುಂಬುವ ಕುರಿತು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಮೇಲೆ ಯಾವೆಲ್ಲ ವಿಚಾರಗಳ ಕುರಿತು ಒತ್ತಡ ಹೇರಬೇಕು ಎಂಬ ಕುರಿತು ವಿಕೃತ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಒಬಿಸಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮತ್ತು ಅವರಿಗೆ ಶಕ್ತಿ ತುಂಬುವಂತಹ ವಿಷಯಗಳ ಕುರಿತು ನಿರ್ಣಯಿಸಲಾಯಿತು.

ಸಭೆಯ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಐಸಿಸಿಯ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ. ರಾಹುಲ್ ಗಾಂಧಿಯವರು ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ.

ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು, ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ.

CM Siddaramaiah
ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಸ್ಕಾಲರ್‌ಶಿಪ್‌ ಕಡಿತ: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ರಾಹುಲ್ ಗಾಂಧಿಯವರ ದೃಢ ನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರವನ್ನು ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ ಜಾತಿ ಗಣತಿಯನ್ನು ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ ರಾಹುಲ್ ಗಾಂಧಿಯವರನ್ನು ಶ್ಲಾಘಿಸುತ್ತದೆ.

ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. ತನ್ಮೂಲಕ ನಮ್ಮ ಮಹಾನ್ ದೇಶದಲ್ಲಿ ಸಮಸಮಾಜವನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ. ನ್ಯಾಯ ಯೋಧರಾದ ರಾಹುಲ್ ಗಾಂಧಿಜಿಯವರ ಧೀರ ಮತ್ತು ನಿರ್ಭಯ ನಾಯಕತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಲು ನಿರ್ಧರಿಸಿ, ಹೋರಾಡಲು ನಾವೆಲ್ಲರೂ ಪ್ರಮಾಣ ಮಾಡುತ್ತೇವೆಂದು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳನ್ನು ವಿವರಿಸಿದ ಅವರು, ಭಾರತೀಯ ಜನಗಣತಿ ಆಯೋಗ, ಅಧಿಕೃತವಾಗಿ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು, ಭಾರತ (ಒಆರ್‌ಜಿಐ) ಇವರ ವತಿಯಿಂದ ರಾಷ್ಟ್ರ ಮಟ್ಟದ ಜಾತಿ ಗಣತಿ ಕೈಗೊಳ್ಳುವುದು. ಜನಗಣತಿಯು ಪ್ರತಿ ಜಾತಿ ಮತ್ತು ವ್ಯಕ್ತಿಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು ಮತ್ತು ತೆಲಂಗಾಣ ರಾಜ್ಯದ ಸೀಪ್ (SEEEP Caste Survey) ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು.

ಭಾರತೀಯ ಜನಗಣತಿ ಆಯೋಗ, ಅಧಿಕೃತವಾಗಿ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು, ಭಾರತ (ಒಆರ್‌ಜಿಐ) ಇವರ ವತಿಯಿಂದ ರಾಷ್ಟ್ರ ಮಟ್ಟದ ಜಾತಿ ಗಣತಿ ಕೈಗೊಳ್ಳುವುದು. ಜನಗಣತಿಯು ಪ್ರತಿ ಜಾತಿ ಮತ್ತು ವ್ಯಕ್ತಿಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು ಮತ್ತು ತೆಲಂಗಾಣ ರಾಜ್ಯದ ಸೀಪ್ (SEEEP Caste Survey) ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು.

ಸಂವಿಧಾನದ ಅನುಚ್ಛೇಧ 15(5) ರ ಪ್ರಕಾರ ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಬೇಕು ಎಂಬ ಮೂರು ನಿರ್ಣಯಗಳನ್ನು ಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

CM Siddaramaiah
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ OBC ಮೊದಲ ಸಭೆ: ಮತದಾರರ ಮನವೊಲಿಸುವ ರಾಹುಲ್ ಯೋಜನೆಗೆ ಸಮಿತಿ ಬೆಂಬಲ

2015ನೇ ಇಸವಿಯಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳಲು ಹಿಂದುಳಿದ ವರ್ಗದ ಆಯೋಗಕ್ಕೆ ಆದೇಶ ನೀಡಲಾಗಿತ್ತು. ಕೇವಲ ಹಿಂದುಳಿದ ವರ್ಗವಲ್ಲದೇ ಎಲ್ಲ ಜನರನ್ನು ಸಮೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದ್ದು, ಆಯೋಗವು ಸಮೀಕ್ಷೆಯನ್ನು ನಡೆಸಿತು. 2018ರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ, ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ವರದಿಯನ್ನು ನೀಡಲು ಕಾಲಾವಕಾಶ ನೀಡುವಂತೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೋರಿದರು. ಆಯೋಗದ ಕೋರಿಕೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮನ್ನಿಸಲಿಲ್ಲ. ಅಂದು ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿಯವರು ಆಯೋಗಕ್ಕೆ ಕಾಲಾವಕಾಶವನ್ನು ನೀಡಿದರೂ, ವರದಿಯನ್ನು ಸ್ವೀಕರಿಸದಂತೆ ಸಚಿವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದರು.

ಸಮ್ಮಿಶ್ರ ಸರ್ಕಾರದ ನಂತರದಲ್ಲಿ 3 ವರ್ಷ 10 ತಿಂಗಳು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಆಯೋಗದ ವರದಿಯನ್ನು ಸ್ವೀಕರಿಸುವುದಾಗಲಿ, ಜಾರಿ ಮಾಡುವ ಬಗ್ಗೆಯಾಗಲಿ ಕೈಹಾಕಲಿಲ್ಲ. ನಂತರ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಶಿಫಾರಸ್ಸುಗಳನ್ನು ಮಾಡಿ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿದರು. ಈ ವರದಿಯನ್ನು ನಮ್ಮ ಸಚಿವ ಸಂಪುಟದಲ್ಲಿ ಮಂಡಿಸಿ ಚರ್ಚಿಸಿದಾಗ, ಸದರಿ ವರದಿಯು ಹತ್ತು ವರ್ಷದ ಹಿಂದಿನ ಸಮೀಕ್ಷೆಯನ್ನು ಆಧರಿಸಿರುವುದರಿಂದ ಪುನ: ಸಮೀಕ್ಷೆ ಮಾಡುವ ನಿರ್ಣಯವನ್ನು ಸಚಿವ ಸಂಪುಟ ಕೈಗೊಂಡಿದೆ.

ಸಚಿವ ಸಂಪುಟದ ನಿರ್ಣಯದಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಮೂರು ತಿಂಗಳ ಕಾಲಾವಕಾಶದಲ್ಲಿ ಮರುಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಆಯೋಗವು ನೀಡಿದ ವರದಿಯನ್ನು ಜಾರಿ ಮಾಡಲಾಗುವುದು. 1931 ರ ನಂತರ ಜಾತಿ ಜನಗಣತಿಯನ್ನು ಕೈಗೊಂಡ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದಲೇ ಅದನ್ನು ‘ಕರ್ನಾಟಕ ಮಾದರಿ’ ಎಂದು ಕರೆಯಲಾಗುತ್ತದೆ.

ಕಾಂಗ್ರೆಸ್ ಪಕ್ಷ ಎಂದೆಂದಿಗೂ ಸಂವಿಧಾನಕ್ಕೆ ಬದ್ಧವಾಗಿರುತ್ತದೆ. ಅಹಿಂದ ತತ್ವವು ಎಲ್ಲರಿಗೂ ಸಮಪಾಲು, ಸಮಬಾಳು ಎಂಬುದರ ಆಧಾರವಾಗಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮಾನತೆ ಇಲ್ಲವಾಗಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಬೇಕಾಗಿದೆ. ನ್ಯಾಯಯೋಧ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಜಾತಿಗಣತಿ ಕೇವಲ ಜಾತಿಗಳ ಗಣತಿಯಾಗಿರದೇ, ಅದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ನಡೆಸುವ ಸಮೀಕ್ಷೆಯಾಗಿದೆ. ಹಿಂದುಳಿದ ಸಮುದಾಯಗಳಿಗೆ ಸಮಾನ ಅವಕಾಶ ಒದಗಿಸುವ ದಿಟ್ಟ ನಿರ್ಧಾರವನ್ನು ರಾಹುಲ್ ಗಾಂಧಿಯವರು ಕೈಗೊಂಡಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com