
ರಾಯಚೂರು: ಕೆಡಿಪಿ ಸಭೆಯಲ್ಲಿ ಅರಣ್ಯಾಧಿಕಾರಿಯೊಬ್ಬರು ರಮ್ಮಿ ಗೇಮ್ ಆಡುತ್ತಾ ಸಮಯ ವ್ಯರ್ಥ ಮಾಡುತ್ತಿದ್ದ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.
ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಭಿವೃದ್ಧಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿತ್ತು.
ಈ ಕೆಡಿಪಿ ಸಭೆಯಲ್ಲಿಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಅವರು ಸಭಾಂಗಣದಲ್ಲೇ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಷಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ ಅವರನ್ನು ಸಭೆಯಿಂದ ಹೊರಗೆ ಕಳಿಸಿದರು. ಡಿಸಿಎಫ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಶಾಸಕರ ಆಕ್ರೋಶ
ಸಭಾ ಗೌರವ ಕಾಯ್ದುಕೊಳ್ಳುವಂತೆ ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ಕೊಂಡರು. ನೀವು ಗಂಭೀರವಾಗಿಲ್ಲ, ಅಧಿಕಾರಿಗಳು ಗಂಭೀರವಾಗಿಲ್ಲ. ಕನಿಷ್ಠ ಪಕ್ಷ ಶಾಸಕರ ಗೌರವವನ್ನಾದರೂ ಉಳಿಸಿ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ವಿಡಿಯೊ ತೆಗೆಯಲಾಗಿದೆ. ಶಾಸಕರು ಮಾತನಾಡುವ ಭರದಲ್ಲಿ ಏಕವಚನದಲ್ಲಿ ಮಾತನಾಡಿ ಸಚಿವರೇ ಮುಜುಗರಕ್ಕೆ ಒಳಗಾಗುವಂತೆ ಮಾಡಿದರು.
ಅಧಿಕಾರಿ ವಿರುದ್ಧ ಶಿಸ್ತು ಕ್ರಮ
ಇನ್ನು ವಿಚಾರ ತಿಳಿಯುತ್ತಲೆ ಅಧಿಕಾರಿ ವಿರುದ್ದ ನೋಟೀಸ್ ನೀಡಿ ಶಿಸ್ತು ಕ್ರಮ ಜರುಗಿಸುವಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದು ಮಾತ್ರವಲ್ಲದೆ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ನೀತಿಶ್ ಕೆ. ಅವರಿಗೆ ಆದೇಶಿಸಿದ್ದಾರೆ.
ನೋಟಿಸ್ ಜಾರಿ
ಇದೇ ವಿಚಾರವಾಗಿ ಬೀದರ್ ನಲ್ಲಿ ಮಾತನಾಡಿದ ‘ರಾಯಚೂರಿನಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ರಮ್ಮಿ ಆಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
Advertisement