
ಬೆಂಗಳೂರು: ಪೊಲೀಸರು 'ಆರ್‌ಸಿಬಿ ಸೇವಕರು'ಎಂಬಂತೆ ವರ್ತಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂಬ ಸರ್ಕಾರದ ನಿಲುವಿಗೆ ಅಮಾನತುಗೊಂಡ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದ ಕ್ರಮವನ್ನು ರದ್ದುಪಡಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆಯುವಂತೆ ಕೋರಿ ಆರ್‌ಸಿಬಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಮುಂದೆ ವಿಕಾಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ದಾಖಲೆಗಳಿಲ್ಲದೇ ಪೊಲೀಸರನ್ನು ಸರ್ಕಾರ ಅಮಾನತುಪಡಿಸಿದೆ. ತನಿಖಾ ವರದಿ ಬರುವ ಮುನ್ನವೇ ತನಗೆ ಮುಜುಗರವಾಗಿದೆ ಎಂದು ಯಾರನ್ನೋ ಅಮಾನತು ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ, ಆರ್‌ಸಿಬಿ ತಂಡವನ್ನು ಸ್ವಾಗತಿಸಲು ಯಾರು ವಿಮಾನ ನಿಲ್ದಾಣಕ್ಕೆ ಹೋಗಿದ್ದರು ಎಂಬ ಸಂಗತಿ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.
‘ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿದರೂ ತಪ್ಪು. ನಿರ್ವಹಿಸಿದೇ ಇದ್ದರೂ ತಪ್ಪು ಎಂಬುದಕ್ಕೆ ಈ ಪ್ರಕರಣ ಸ್ಪಷ್ಟ ನಿದರ್ಶನವಾಗಿದೆ. ನ್ಯಾಯಾಲಯದ ಮುಂದೆ ಎಲ್ಲವೂ ಸರಿಯಾಗಿದೆ ಎಂಬುದನ್ನು ತೋರಿಸಲು ದಾಖಲೆಗಳ ಅನುಪಸ್ಥಿತಿಯಲ್ಲಿಯೂ ವಿಕಾಶೇ ಕುಮಾರ್ ಅವರನ್ನು ಸರ್ಕಾರ ನಿಂದಿಸುತ್ತಿದೆ ಎಂದು ಆಕ್ಷೇಪಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
Advertisement