
ಬೆಂಗಳೂರು: ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 79 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಹೇಶ್ವರ್ ರಾವ್ ಅವರು, ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಆಯಾ ಇಲಾಖೆಗಳಿಗೆ ನೀಡಲಾದ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನಡೆಯುವುದರಿಂದ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆಸನಗಳ ವ್ಯವಸ್ಥೆ, ಯಾವ ದ್ವಾರಗಳ ಮೂಲಕ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್, ಮಾರ್ಗ ಬದಲಾವಣೆ ಮತ್ತು ಇತರ ವ್ಯವಸ್ಥೆಗಳಲ್ಲಿ ಯಾವುದೇ ಗೊಂದಲ ಇರಬಾರದು.
ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಭದ್ರತಾ ಕ್ರಮಗಳ ಕೈಗೊಳ್ಳಿ. ಪ್ರಥಮ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆಯು ಆಂಬ್ಯುಲೆನ್ಸ್‌ಗಳು, ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆಗಳ ಕೈಗೊಳ್ಳಿ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ತಂಡವನ್ನು ಆಯ್ಕೆ ಮಾಡಬೇಕು. ಪ್ರವೇಶ ದ್ವಾರಗಳ ಬಳಿ ತಪಾಸಣೆ, ಸ್ಕ್ಯಾನಿಂಗ್ ವ್ಯವಸ್ಥೆ, ಪಾಸ್‌ಗಳ ಅಳವಡಿಕೆ ಮತ್ತು ಇತರವುಗಳಿಗಾಗಿ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ.
ಇದೇ ವೇಳೆ ಮಳೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸಮಸ್ಯೆಗಳು ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳು, ತರಬೇತಿಗಾಗಿ ಬಂದಾಗ ಅಧಿಕಾರಿಗಳು ಅವರಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
Advertisement