
ಬೆಂಗಳೂರು: ಪರಿಶಿಷ್ಟ ಸಮುದಾಯದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಆಗಸ್ಟ್ 1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮಾದಿಗರ ಸಂಘಟನೆಗಳು ತೀರ್ಮಾನಿಸಿವೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರು, ಆಗಸ್ಟ್.1ರಂದು ಮಾದಿಗರು ಮತ್ತು ಸಮುದಾಯಕ್ಕೆ ಸಂಬಂಧಿಸಿದ ಸಂಘಟನೆಗಳ ಸದಸ್ಯರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆಂದು ಹೇಳಿದ್ದಾರೆ.
ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಒಂದು ವರ್ಷ ತುಂಬಲಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ಧೋರಣೆ ಅನುಸರಿಸುತ್ತಿದೆ. ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳದಿದ್ದರೆ, ಕರ್ನಾಟಕ ಬಂದ್ ಮಾಡಲೂ ಕೂಡ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಬಳಿಕ ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ನಲ್ಲಿ ಒಳಮೀಸಲಾತಿ ಜಾರಿ ಮಾಡಲಾಗಿದೆ. ಹೀಗಿದ್ದರೂ ಕರ್ನಾಟಕದಲ್ಲಿ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ. ಇದು ಸರಿಯಲ್ಲ. ಒಳ ಮೀಸಲಾತಿ ಜಾರಿಯಾಗಬೇಕು ಎನ್ನುವುದು ಕಳೆದ ಮೂರೂವರೆ ದಶಕಗಳಿಂದ ನಡೆಯುತ್ತಿರುವ ಹೋರಾಟವಾಗಿದೆ. ಒಳ ಮೀಸಲಾತಿ ಶೀಘ್ರ ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಆಗಸ್ಟ್ 16ರೊಳಗೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ಪ್ರಯತ್ನಿಸಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಪರಿಶಿಷ್ಟ ಸಮುದಾಯದಲ್ಲಿ 101 ಜಾತಿಗಳಿದ್ದು, ಮೀಸಲಾತಿಯ ಸೌಲಭ್ಯವನ್ನು ಹೆಚ್ಚು ಪಡೆಯುತ್ತಿರುವವರು ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾದಿಗ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು
Advertisement