ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ದುರಂತದ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಸಲ್ಲಿಸಿದ್ದ ವರದಿಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಹೀಗಾಗಿ RCB, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು DNA ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಕಂಪನಿಗಳಿಗೆ ಸಂಕಷ್ಟ ಎದುರಾಗಿದೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಂಪುಟ ನಿರ್ಧರಿಸಿದ್ದು ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ಈಮಧ್ಯೆ, RCB ಐಪಿಎಲ್ ವಿಜಯೋತ್ಸವದ ಮೆರವಣಿಗೆಯ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ವರ್ಷದ ದಿವ್ಯಾಂಶಿ ಮೃತಪಟ್ಟಿದ್ದು ಆಕೆಯ ಶವಪರೀಕ್ಷೆ ವೇಳೆ ಕಿವಿಯೋಲೆ ಕಳುವಾಗಿದೆ ಎಂದು ದಿವ್ಯಾಂಶಿ ತಾಯಿ ಅಶ್ವಿನಿ ಅವರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡರೆ ಅದು ಕರ್ನಾಟಕದ ಜನತೆಗೆ ಬಗೆಯುವ ದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್, ಗೋವಾ ಸಿಎಂ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ.ಈಗಾಗಲೇ ಮಹದಾಯಿ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು ಅಷ್ಟೇ ಎಂದರು. ಇನ್ನು ಕರ್ನಾಟಕದ 28 ಸಂಸದರು, 12 ಜನ ರಾಜ್ಯಸಭೆ ಸದಸ್ಯರು ಈ ಬಗ್ಗೆ ಮಾತಾಡಬೇಕು. ನಮ್ಮ ರಾಜ್ಯದ ಸಂಸದರ ಸ್ವಾಭಿಮಾನದ ಪ್ರಶ್ನೆ ಎಂದರು.
2020ರ ಆಗಸ್ಟ್ 11 ರಂದು ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ NIA ಕೋರ್ಟ್ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್, ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಸೈಯದ್ ಆಸಿಫ್ ಮತ್ತು ಮೊಹಮ್ಮದ್ ಅತೀಫ್ ಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 46 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಈ ಮೂವರ ವಿರುದ್ಧ ಗಲಭೆ ನಡೆಸಿ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪವಿತ್ತು. ಈ ಸಂಬಂಧ ಯುಎಪಿಎ ಕಾಯ್ದೆ ಅಡಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಶ್ರೇಷ್ಠತಾ ಕೇಂದ್ರ ಸ್ಥಾಪನೆ ಮತ್ತು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ಆರಂಭ ಸೇರಿದಂತೆ ಹಲವಾರು ಪ್ರಮುಖ ಯೋಜನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇಸ್ರೋ, ಡಿಆರ್‌ಡಿಒ ಮತ್ತು ಬಾಹ್ಯಾಕಾಶ ವಲಯದಲ್ಲಿ ಪರೀಕ್ಷಾ ಮೂಲಸೌಕರ್ಯಗಳಿಗಾಗಿ ಮುಂದಿನ ಐದು ವರ್ಷಗಳಲ್ಲಿ ಒಟ್ಟು 10 ಕೋಟಿ ರೂ. ಹಂಚಿಕೆ ಮಾಡಲಾಗುತ್ತದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಅಂದಾಜು 50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಬಾಹ್ಯ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ. ಐದು ವರ್ಷಗಳಲ್ಲಿ ಒಟ್ಟು 1,000 ಕೋಟಿ ರೂಪಾಯಿ ಬಜೆಟ್ ಹಂಚಿಕೆಯೊಂದಿಗೆ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಂಪುಟ ಅನುಮೋದನೆ ನೀಡಿದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವಾದ-ಪ್ರತಿವಾದವನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ. ಪವಿತ್ರಾ ಗೌಡ, ದರ್ಶನ್, ಪ್ರದೂಷ್, ಲಕ್ಷ್ಮಣ್, ನಾಗರಾಜ್ ಸೇರಿದಂತೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ ಪರ್ದಿವಾಲಾ ಹಾಗೂ ಜಸ್ಟೀಸ್ ಆರ್ ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ನಟ ದರ್ಶನ್ ಗೆ ಜಾಮೀನು ನೀಡಿದ್ದ ಹೈಕೋರ್ಟ್ ಅನ್ನು ತೀವ್ರವಾಗಿ ಟೀಕಿಸಿದ್ದು ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯಾದ ತಪ್ಪು ಮಾಡಬಹುದಾ ಎಂದು ಸುಪ್ರೀಂಕೋರ್ಟ್ ನೇರವಾಗಿ ಪ್ರಶ್ನೆ ಮಾಡಿದೆ.
Advertisement