
ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ. ಹೀಗಾಗಿ ರೈತರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.
ಈಗಾಗಲೇ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೆ ಮಾರಾಟ ಮಾಡಲಾಗಿದೆ. ಇನ್ನು 1.64 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ಉಳಿಕೆಯಿದೆ. ಅದರೊಂದಿಗೆ ರಸಗೊಬ್ಬರ ವಿಚಾರದಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಲು ಇಲಾಖೆಯ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ವರ್ಷ, ನೈಋತ್ಯ ಮುಂಗಾರು ಅವದಿಗಿಂತ ಬೇಗನೆ ಪ್ರಾರಂಭವಾಯಿತು. ಮೆಕ್ಕೆಜೋಳದ ಬಿತ್ತನೆ 2 ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಿದೆ, ಹೀಗಾಗಿ ಯೂರಿಯಾಕ್ಕೆ ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ ಎಂದು ಅವರು ಹೇಳಿದರು. ಕೆಲವು ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿಯೇ ಬೃಹತ್ ಪ್ರಮಾಣದಲ್ಲಿ ರಸಗೊಬ್ಬರಗಳನ್ನು ಖರೀದಿಸಿದ್ದಾರೆ, ಇದು ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ ಎಂದು ಅವರು ಹೇಳಿದರು.
ಜುಲೈ ವರೆಗೆ ಕೇಂದ್ರ ಸರ್ಕಾರ 5.34 ಲಕ್ಷ ಟನ್ ರಸಗೊಬ್ಬರಗಳನ್ನು ಪೂರೈಸಿದ್ದು, ಅದರಲ್ಲಿ 4.30 ಲಕ್ಷ ಮೆಟ್ರಿಕ್ ಟನ್ ವಿತರಿಸಲಾಗಿದೆ. ಏಪ್ರಿಲ್ ನಿಂದ ಜುಲೈ ವರೆಗೆ ರಾಜ್ಯದಿಂದ 6.8 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಡಿಕೆಯಿದ್ದರೆ, ಕೇಂದ್ರ 6.82 ಲಕ್ಷ ಮೆಟ್ರಿಕ್ ಟನ್ ಪೂರೈಸಿದೆ ಮತ್ತು ರಾಜ್ಯವು 5.26 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ರೈತರಿಗೆ ಪೂರೈಸಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ರಾಜ್ಯವು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ "ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಮತ್ತು ಯಾವುದೇ ಸಮಸ್ಯೆಯನ್ನು ಪರಿಹರಿಸಲು ನಾವು ಅಧಿಕೃತ ತಂಡಗಳನ್ನು ರಚಿಸಿದ್ದೇವೆ" ಎಂದು ಅವರು ಹೇಳಿದರು.
ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೋ ಯೂರಿಯಾ ಕೂಡ ಲಭ್ಯವಿದೆ. ಅದು ಸಹ ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದನ್ನು ಕೃಷಿ ಇಲಾಖೆ, ವಿಶ್ವವಿದ್ಯಾಲಯಗಳು ತಿಳಿಸಿವೆ. ಅದರ ಬಗ್ಗೆಯೂ ರೈತರು ಗಮನಹರಿಸಬೇಕು.
ಹಾಗೆಯೇ, ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ಫಲವತ್ತತೆ ಹಾಗೂ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರ ಬಳಕೆಗಿಂತ ಹಸಿರು ಗೊಬ್ಬರ, ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವ ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
Advertisement