
ಬೆಂಗಳೂರು: ಕರ್ನಾಟಕದಲ್ಲಿ ತಾಂತ್ರಿಕ ಶಿಕ್ಷಣವನ್ನು ಬಲಪಡಿಸುವ ಪ್ರಯತ್ನವಾಗಿ, ರಾಜ್ಯ ಸರ್ಕಾರವು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ADB) ನಿಂದ 2,600 ಕೋಟಿ ರೂಪಾಯಿ ಸಾಲ ಪಡೆದುಕೊಳ್ಳುತ್ತಿದೆ.
ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಉದ್ಯಮ-ಸಂಬಂಧಿತ ಮತ್ತು ಕೌಶಲ್ಯ ಆಧಾರಿತ ಕಲಿಕೆಯನ್ನು ಉತ್ತೇಜಿಸಲು ಈ ಸಾಲವನ್ನು ಬಳಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ, ಎಂ.ಸಿ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಕುರಿತು ನವೀಕರಣಗಳು ಮತ್ತು ಮಾಹಿತಿಯನ್ನು ಒದಗಿಸಲು ಉನ್ನತ ಶಿಕ್ಷಣ ಇಲಾಖೆ ಹೊರತಂದಿರುವ "ಕರ್ನಾಟಕ ಉನ್ನತ ಶಿಕ್ಷಣ" ತ್ರೈಮಾಸಿಕ ನಿಯತಕಾಲಿಕೆಯ ಬಿಡುಗಡೆ ಸಮಾರಂಭದಲ್ಲಿ ಈ ವಿಷಯ ತಿಳಿಸಿದರು.
ಈ ನಿಯತಕಾಲಿಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದರು.
ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣ ಮೂಲಸೌಕರ್ಯವನ್ನು ಸುಧಾರಿಸಲು 2,600 ಕೋಟಿ ರೂಪಾಯಿ ಸಾಲವನ್ನು ನೀಡಲು ಎಡಿಬಿ ಒಪ್ಪಿಕೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆ ಪ್ರಸ್ತಾವನೆಯನ್ನು ಅನುಮೋದಿಸಿದೆ. ಎಡಿಬಿ ಅಧಿಕಾರಿಗಳು ನಮ್ಮ ಸಂಸ್ಥೆಗಳಿಗೆ ಭೇಟಿ ನೀಡಿದ್ದು, ಸಾಲವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಡಾ. ಸುಧಾಕರ್ ಹೇಳಿದರು.
ಆಗುವ ಅನುಕೂಲತೆಗಳೇನು?
ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳು ಉತ್ತಮ ಸೌಲಭ್ಯಗಳೊಂದಿಗೆ ಸಜ್ಜುಗೊಳ್ಳಲಿವೆ. ವಿದ್ಯಾರ್ಥಿಗಳು ಕೋರ್ಸ್ ಮುಗಿಸಿ ಉದ್ಯೋಗಕ್ಕೆ ಸಜ್ಜಾಗಲು ಪ್ರಾಯೋಗಿಕ ಮತ್ತು ಕೌಶಲ್ಯ ಆಧಾರಿತ ಶಿಕ್ಷಣದ ಮೇಲೆ ಗಮನ ಹರಿಸಲಾಗುವುದು. ತಾಂತ್ರಿಕ ಮತ್ತು ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಖಾತರಿಪಡಿಸುವ ತರಬೇತಿಯನ್ನು ನೀಡುವುದು ನಮ್ಮ ಗುರಿಯಾಗಿದೆ. ಈ ಹೂಡಿಕೆಯು ಶಿಕ್ಷಣ ಮತ್ತು ಕೈಗಾರಿಕಾ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ ಎಂದು ಸಚಿವರು ಹೇಳಿದರು.
ತ್ರೈಮಾಸಿಕ ನಿಯತಕಾಲಿಕವು ಉನ್ನತ ಶಿಕ್ಷಣ ಇಲಾಖೆ ಮತ್ತು ಸಂಸ್ಥೆಗಳ ನಡುವೆ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಸರ್ಕಾರಿ ಆದೇಶಗಳು, ನಿಯಮಗಳು, ಭಾರತೀಯ ಮತ್ತು ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯಗಳು ಮಾಡಿದ ಶೈಕ್ಷಣಿಕ ಪ್ರಗತಿಯ ಕುರಿತು ಶಿಕ್ಷಣ ತಂತ್ರಜ್ಞಾನದಲ್ಲಿನ ಜಾಗತಿಕ ಪ್ರವೃತ್ತಿಗಳು ಮತ್ತು ತಜ್ಞರ ಲೇಖನಗಳನ್ನು ಪ್ರಕಟಿಸುತ್ತದೆ ಎಂದು ಅವರು ಹೇಳಿದರು.
Advertisement