
ಬೆಂಗಳೂರು: ನಗರದ ರಸ್ತೆ ಗುಂಡಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.
ಮಂಗಳವಾರ ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಸಭೆ ನಡೆಸಿದರು.
ಮಳೆ ವಾತಾವರಣ ಇರುವುದರಿಂದ ಕೋಲ್ಡ್ ಮಿಕ್ಸ್ ಹಾಗೂ ಇಕೋ ಫಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಎಲ್ಲಾ ಎಂಟು ಬಿಬಿಎಂಪಿ ವಲಯಗಳಲ್ಲಿ ಗುತ್ತಿಗೆದಾರರ ಮೂಲಕ ಅವಶ್ಯ ಡಾಂಬರನ್ನು ಪಡೆದು ತ್ವರಿತಗತಿಯಲ್ಲಿ ದುರಸ್ತಿ ಕಾಮಗಾರಿ ನಡೆಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ವರದಿಯನ್ನು ಪ್ರತಿ ನಿತ್ಯ ನೀಡಬೇಕು ಎಂದು ಆದೇಶಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ 690 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳಿಗೆ ಡಾಂಬರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು. ಮಳೆಗಾಲದ ವೇಳೆ 82 ಕಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಅದನ್ನು ತಪ್ಪಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಉಂಟಾಗುವ ಪ್ರದೇಶಗಳು ಹಾಗೂ ರಸ್ತೆಗಳಿಗೆ ಆದ್ಯತೆ ನೀಡಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿಶೇಷ ಆಯುಕ್ತರು, ವಲಯ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಅನುಚೇತ್ ಮತ್ತು ಎಲ್ಲಾ ವಲಯ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.
Advertisement