
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ (IPL) ಟ್ರೋಫಿ ಗೆದ್ದಿದ್ದು, ಆ ಮೂಲಕ ಕೋಟ್ಯಾಂತರ ಆರ್‌ಸಿಬಿ (RCB) ಅಭಿಮಾನಿಗಳ ಕನಸನ್ನು ನನಸು ಮಾಡಿದೆ.
ಇದಕ್ಕಾಗಿ ಆರ್ ಸಿಬಿ ತಂಡ ಬೆಂಗಳೂರಿನಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ ನಡೆಸಲು ಮುಂದಾಗಿತ್ತು. ಆದರೆ ಈ ಸಂಭ್ರಮಾಚರಣೆಯೇ ದುರಂತಕ್ಕೆ ಕಾರಣವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾವಿರಾರು ಜನ ಧಾವಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್, ಸ್ಟೇಷನ್ ಹೌಸ್ ಮಾಸ್ಟರ್, ಸ್ಟೇಷನ್ ಹೌಸ್ ಆಫೀಸರ್, ಎಸಿಪಿ, ಕೇಂದ್ರ ವಿಭಾಗದ ಡಿಸಿಪಿ, ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ, ಹೆಚ್ಚುವರಿ ಪೊಲೀಸ್ ಆಯುಕ್ತ, ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
ಬೇಜವಾಬ್ದಾರಿತ, ಆಘಾತಕಾರಿ
ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು. ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಹಲವು ಅಧಿಕಾರಿಗಳ ತಲೆದಂಡ
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ.
ನ್ಯಾಯಾಂಗ ತನಿಖೆಗೆ ಆದೇಶ
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗಿದ್ದು, ಈ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಅವರ ಅಧ್ಯಕ್ಷತೆಯಲ್ಲಿ, ನಾವು ಏಕವ್ಯಕ್ತಿ ಆಯೋಗವನ್ನು ನೇಮಿಸಿದ್ದೇವೆ ಎಂದರು.
Advertisement