
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‌ಸಿಎ) ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ರೋಹನ್ ಗೋಮ್ಸ್ ಅವರು ಜೂನ್ 5 ರಂದು ನೀಡಿದ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 125 (ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣದಲ್ಲಿ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕೆಎಸ್‌ಸಿಎ ಆಡಳಿತವನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯನ್ನು ಉಲ್ಲೇಖಿಸಿ, 25 ವರ್ಷದ ಗೋಮ್ಸ್ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ, ಸ್ಥಳದಲ್ಲಿ ಟಿಕೆಟ್ ನೀಡಲಾಗುವುದು ಮತ್ತು ಟಿಕೆಟ್ ಇಲ್ಲದೆಯೂ ಪ್ರವೇಶವನ್ನು ಅನುಮತಿಸಲಾಗುವುದು ಎಂದು ಆರ್‌ಸಿಬಿ ಸಾಮಾಜಿಕ ಮಾಧ್ಯಮ ಪೋಸ್ಟ್ ನೋಡಿದ ನಂತರ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಆರ್‌ಸಿಬಿ ಓಪನ್-ಟಾಪ್ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯುವ ಬಗ್ಗೆಯೂ ಪ್ರಚಾರ ಮಾಡಿದೆ ಎಂದು ಗೋಮ್ಸ್ ಆರೋಪಿಸಿದ್ದಾರೆ.
ಎಫ್‌ಐಆರ್ ಪ್ರಕಾರ, ಗೋಮ್ಸ್ ಗೇಟ್ ಸಂಖ್ಯೆ 17 ಅನ್ನು ತಲುಪಿದಾಗ, ಕಾಲ್ತುಳಿತ ಸಂಭವಿಸಿದ್ದು, ತನ್ನ ಭುಜದ ಕೀಲು ಸ್ಥಳಾಂತರಗೊಂಡು ಚಿಕಿತ್ಸೆಗಾಗಿ ವಿ ಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲ, ದಾರಿತಪ್ಪಿಸುವ ಮಾಹಿತಿ ಮತ್ತು ಆಯೋಜಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಈಗಾಗಲೇ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ ಗುರುವಾರ ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ನಾಲ್ವರನ್ನು ಬಂಧಿಸಲಾಗಿದೆ.
Advertisement