
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ), ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.
ಆರ್‌ಸಿಬಿ ತಂಡದ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದು, ಕ್ರೀಡಾಂಗಣದ ಮುಂಭಾಗದಲ್ಲಿ ಬುಧವಾರ ಸಂಜೆ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ ಮತ್ತು 56 ಜನ ಗಾಯಗೊಂಡಿದ್ದಾರೆ.
ಕಾಲ್ತುಳಿತ ಘಟನೆಗೆ ಗುಪ್ತಚರ ವೈಫಲ್ಯವೇ ಕಾರಣ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ, ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆರ್‌ಸಿಬಿ ಅಭಿನಂದನಾ ಸಮಾರಂಭ, ವಿಜಯಯಾತ್ರೆಗೆ ಒಮ್ಮೆಗೆ ಇಷ್ಟೊಂದು ಜನ ಆಗಮಿಸುತ್ತಾರೆ ಎಂಬ ಯಾವ ಸುಳಿವನ್ನು ಗುಪ್ತಚರ ಇಲಾಖೆಯು ಸರ್ಕಾರಕ್ಕೆ ಅಥವಾ ಪೊಲೀಸ್ ಇಲಾಖೆಗೆ ನೀಡಿಲ್ಲ. ಹೀಗಾಗಿ, ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ರಾಜ್ಯ ಸರ್ಕಾರ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
ನಿಂಬಾಳ್ಕರ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರವಿಕುಮಾರ್ ಅವರನ್ನು ತತ್‌ಕ್ಷಣದಿಂದಲೇ ಜಾರಿಯಾಗುವಂತೆ ನೇಮಕ ಮಾಡಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಅಮಾನತುಗೊಳಿಸಿದ್ದಾರೆ.
Advertisement