
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟೀಕಿಸಿದ್ದಾರೆ.
ಈ ಘಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿಗಳನ್ನಾಗಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದ್ದು, ಘಟನೆಗೆ ಮೇಲ್ನೋಟಕ್ಕೆ 'ಜವಾಬ್ದಾರರು' ಮತ್ತು 'ಕರ್ತವ್ಯದಲ್ಲಿ ನಿರ್ಲಕ್ಷ್ಯ' ತೋರಿದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಿಎಂ ಹೇಳಿದ್ದಾರೆ.
'ಅವರು (ಬಿಜೆಪಿ) ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಘಟನೆಗೆ ಜವಾಬ್ದಾರರಾಗಿರುವ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ನಾವು ಕ್ರಮ ಕೈಗೊಂಡಿದ್ದೇವೆ' ಎಂದು ಮುಖ್ಯಮಂತ್ರಿ ಇಲ್ಲಿ ಹೇಳಿದರು.
ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 'ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ ನಂತರವೇ ಆರ್‌ಸಿಬಿ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಿನ್ನೆ, ಮುಖ್ಯಮಂತ್ರಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಐದು ಅಧಿಕಾರಿಗಳನ್ನು ಹಠಾತ್ತನೆ ಅಮಾನತುಗೊಳಿಸಿದ್ದಾರೆ' ಎಂದು ಹೇಳಿದರು.
ಕಾಲ್ತುಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಸೇರಿದಂತೆ ಹಿರಿಯ ಸಚಿವ ಸಂಪುಟ ಸದಸ್ಯರನ್ನು ದೂಷಿಸಿದ ಅವರು, ಅವರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
'ಘಟನೆಯಲ್ಲಿ ನಿಜವಾದ ಆರೋಪಿ ಬೇರೆ ಯಾರೂ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಎರಡನೇ ಆರೋಪಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮೂರನೇ ಆರೋಪಿ ಗೃಹ ಸಚಿವ ಜಿ ಪರಮೇಶ್ವರ ಆಗಿದ್ದಾರೆ. ಇವರನ್ನು ನಿಜವಾಗಿಯೂ ತನಿಖೆಗೆ ಒಳಪಡಿಸಬೇಕು' ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದರು.
ಜೂನ್ 4 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ನಂತರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೇರಿದಂತೆ ಹಲವಾರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರು ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.
Advertisement