ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತ ಘಟನೆ ಸಂಬಂಧ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಕೋರಿ ಕೆಎಸ್ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ, 'ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್, ಸ್ಟೇಷನ್ ಹೌಸ್ ಮಾಸ್ಟರ್, ಸ್ಟೇಷನ್ ಹೌಸ್ ಆಫೀಸರ್, ಎಸಿಪಿ, ಕೇಂದ್ರ ವಿಭಾಗದ ಡಿಸಿಪಿ, ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ, ಹೆಚ್ಚುವರಿ ಪೊಲೀಸ್ ಆಯುಕ್ತ, ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ" ಎಂದು ಹೇಳಿದ್ದಾರೆ. ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗಿದ್ದು, ಈ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಅವರ ಅಧ್ಯಕ್ಷತೆಯಲ್ಲಿ, ನಾವು ಏಕವ್ಯಕ್ತಿ ಆಯೋಗವನ್ನು ನೇಮಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಐಪಿಎಸ್ ಅಧಿಕಾರಿ ದಯಾನಂದ್ ಅಮಾನತುಗೊಂಡ ಬಳಿಕ ಬೆಂಗಳೂರಿನ ನೂತನ ಮೇಯರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ. ಈ ಮಧ್ಯೆ, ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ), ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಇದು ಸ್ವತಃ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯ ಮೇಲೆ ಪರಿಣಾಮ ಬೀರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದರಾಜ್ ಅವರಿಗೂ ಗೇಟ್‌ಪಾಸ್ ನೀಡಲಾಗಿದೆ. ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ
ತುಮಕೂರು ಜಿಲ್ಲೆಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ. ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ದ್ವಿಚಕ್ರ ವಾಹನ ಸವಾರರು ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ.
Advertisement