News headlines 06-08-2025 | ಬಿಎಂಟಿಸಿ ಬಸ್ ಡಿಕ್ಕಿ: ಓರ್ವ ದ್ವಿಚಕ್ರವಾಹನ ಸವಾರ ಸಾವು; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ; ಕಾಲ್ತುಳಿತ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಾಲ್ತುಳಿತ ಪರಿಹಾರ: 25 ಲಕ್ಷಕ್ಕೆ ಏರಿಕೆ
News headlines 06-08-2025 | ಬಿಎಂಟಿಸಿ ಬಸ್ ಡಿಕ್ಕಿ: ಓರ್ವ ದ್ವಿಚಕ್ರವಾಹನ ಸವಾರ ಸಾವು; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ; ಕಾಲ್ತುಳಿತ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

1. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಹೊರಡಿಸಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಮೇ.01 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಈಗ ಎನ್​ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ.

2. ಕಾಲ್ತುಳಿತ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಬಿಜೆಪಿ ಶಾಸಕರು ಮತ್ತು ಸಂಸದರು ಆರ್ ಅಶೋಕ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಈ ದುರಂತಕ್ಕೆ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಇನ್ನು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಯಾದ ಮೂರು ದಿನಗಳ ನಂತರ, ವಿಧಾನಸೌಧದ ಭದ್ರತಾ ಮುಖ್ಯಸ್ಥರು ಆರ್‌ಸಿಬಿ ಸನ್ಮಾನ ಕಾರ್ಯಕ್ರಮವನ್ನು ವಿರೋಧಿಸಿ ಬರೆದ ಪತ್ರ ಇದೀಗ ವೈರಲ್ ಆಗಿದೆ. ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದ ಪತ್ರವು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ವಿರೋಧದ ಹೊರತಾಗಿಯೂ, ಈ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಜೂನ್ 4 ರಂದು ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂಎನ್ ಕರಿಬಸವನ ಗೌಡ ತಮ್ಮ ಪತ್ರದಲ್ಲಿ, ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದರು.

3. ಕಾಲ್ತುಳಿತ ಪ್ರಕರಣ: ಪರಿಹಾರ ಮೊತ್ತ 25 ಲಕ್ಷಕ್ಕೆ ಏರಿಕೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಗಳಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದು 47ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

4. ಬಿಎಂಟಿಸಿ ಬಸ್ ಡಿಕ್ಕಿ: ಓರ್ವ ದ್ವಿಚಕ್ರವಾಹನ ಸವಾರ ಸಾವು

ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಫ್ಲೈಓವರ್ ಬಳಿ ನಡೆದಿದೆ. ಮೊಹಮ್ಮದ್ ಜಮ್ಷಿರ್ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಜಮ್ಷಿರ್ ಪತ್ನಿ ಆಯಿಷಾ, ಮಕ್ಕಳಾದ ಅಲೀಜಾ, ಆಫಿಯಾಗೆ ಗಾಯವಾಗಿದೆ. ಇನ್ನು ಜೂ.06 ರಂದು ರಾತ್ರಿ ಮೆಟ್ರೋ ಪಿಲ್ಲರ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಓರ್ವ ಪ್ರಯಾಣಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com