
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಸಂಬಂಧಿಸಿದಂತೆ ಅಮಾನತುಗೊಂಡ ಐವರು ಅಧಿಕಾರಿಗಳಲ್ಲಿ ಒಬ್ಬರಾದ ಹಿರಿಯ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಅವರು ತಮ್ಮ ಅಮಾನತು ಪ್ರಶ್ನಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ)ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 5 ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಚ್.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಿದೆ.
ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ತಮ್ಮ ಅಮಾನತು ಆದೇಶ ಪ್ರಶ್ನಿಸಿ ಕಳೆದ ವಾರ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಮಂಡಳಿಯು ಮುಂದಿನ ದಿನಗಳಲ್ಲಿ ಈ ವಿಷಯವನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಅಮಾನತು ಸಮರ್ಥಿಸಿಕೊಂಡ ಸಿದ್ದರಾಮಯ್ಯ, ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದವರನ್ನು ಪ್ರಾಥಮಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದರು.
ಅಮಾನತು ಆದೇಶದಲ್ಲಿ, 'ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದಿದೆ' ಎಂದು ಹೇಳಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ಈಗಾಗಲೆ ನಾಲ್ವರನ್ನು ಬಂಧಿಸಲಾಗಿದೆ.
Advertisement