ತುಮಕೂರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲು ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಬೆಂಗಳೂರಿನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ತುಮಕೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. “20,000 ಎಕರೆ ಪ್ರದೇಶದಲ್ಲಿ(ತುಮಕೂರಿನಲ್ಲಿ) ಕೈಗಾರಿಕಾ ಕೇಂದ್ರವಿದೆ. ಬೆಂಗಳೂರಿನಂತೆ ತುಮಕೂರನ್ನು ವಿಸ್ತರಿಸಬೇಕೆಂದು ಹಲವರು ಒತ್ತಾಯಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ, “ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದ ರೀತಿಯಲ್ಲಿ, ತುಮಕೂರನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಿದರೆ, ಅಭಿವೃದ್ಧಿಯ ವಿಷಯದಲ್ಲಿ ನಮಗೆ ಪ್ರಯೋಜನವಾಗುತ್ತದೆ. ನಾವು ಅದರ ಬಗ್ಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 10ರಂದು ನವದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿ ವೇಳೆ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದು ಸೇರಿದಂತೆ ವಿವಿಧ ಬೆಳವಣಿಗೆಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತಮ್ಮಿಂದ ಮಾಹಿತಿ ಕೇಳಿದೆ ಎಂಬ ವರದಿಗಳನ್ನು ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಈಮಧ್ಯೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ತೀವ್ರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಗಾಯಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.
ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್ ಬುಕ್ಕಿಂಗ್ ಅನ್ನು ಆನ್‌ಲೈನ್ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
RCB ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಅತೀ ಹಿಂದುಳಿದ ಮಠಾಧೀಶರು, ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತು ಕೆಎಸ್ಸಿಎ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಆರ್ಸಿಬಿ ವಾಣಿಜ್ಯೋದ್ಯಮಕ್ಕಾಗಿ ಇದನ್ನು ಬಳಸಿಕೊಂಡಿದೆ. ತಮ್ಮ ಪ್ರತಿಷ್ಠೆಗಾಗಿ ಆರ್ಸಿಬಿ ಕೋಟ್ಯಂತರ ರೂ. ಖರ್ಚು ಮಾಡಿದೆ. ಆರ್ಸಿಬಿ ಹಣಕಾಸು ವ್ಯವಹಾರ ಬಗ್ಗೆ ತನಿಖೆ ನಡೆಸಬೇಕು ಎಂದು ಅತೀ ಹಿಂದುಳಿದ ಮಠಾಧೀಶರ ಮಹಾಸಭಾ ಮನವಿ ಮಾಡಿದೆ.
ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕರ್ನಾಟಕದ ಚಿತ್ರಮಂದಿರಗಳಲ್ಲಿ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಲನಚಿತ್ರ ಪ್ರದರ್ಶನಕ್ಕೆ ಬೆದರಿಕೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ಹೇಳಿಕೆ ನೀಡಿ ಕಮಲ್ ಹಾಸನ್ ವಿವಾದಕ್ಕೆ ಗುರಿಯಾಗಿದ್ದಾರೆ. ಕರ್ನಾಟಕದಲ್ಲಿ ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Advertisement