
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 10ರಂದು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಜೂನ್ 4 ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದು ಸೇರಿದಂತೆ ವಿವಿಧ ಬೆಳವಣಿಗೆಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ ಇತ್ತೀಚಿನ ಬೆಳವಣಿಗೆಗಳ ಕುರಿತು ವಿವರಿಸಲಿದ್ದಾರೆ ಎಂದು ಅದು ಹೇಳಿದೆ.
ಜೂನ್ 4 ರಂದು ಸಂಜೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಘಟನೆಯಲ್ಲಿ ಹನ್ನೊಂದು ಜನರು ಸಾವಿಗೀಡಾಗಿದ್ದು, 56 ಜನರು ಗಾಯಗೊಂಡಿದ್ದರು.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತಮ್ಮಿಂದ ಮಾಹಿತಿ ಕೇಳಿದೆ ಎಂಬ ವರದಿಗಳನ್ನು ಸಿದ್ದರಾಮಯ್ಯ ಭಾನುವಾರ ನಿರಾಕರಿಸಿದ್ದರು.
ಈಮಧ್ಯೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಇಂದು ದೆಹಲಿಯಲ್ಲಿದ್ದಾರೆ.
ಪಕ್ಷದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲು ಯೋಜಿಸುತ್ತಿದ್ದೀರಾ ಎಂದು ವರದಿಗಾರರು ಕೇಳಿದಾಗ, ಬೆಂಗಳೂರಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಇಂದೇ ಹಿಂತಿರುಗುವುದಾಗಿ ಉತ್ತರಿಸಿದರು.
Advertisement