ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಪ್ರಸ್ತುತ ಜಾತಿ ಗಣತಿ ವರದಿ 10 ವರ್ಷ ಹಳೆಯದಾಗಿರುವ ಕಾರಣ ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರ ನಿರ್ಧಾರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಘೋಷಿಸಿದ್ದಾರೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸಿಎಂ ಹೈಕಮಾಂಡ್ ನಾಯಕರೊಂದಿಗೆ ಮಾಹಿತಿ ನೀಡಿದ್ದು, ಸಚಿವ ಸಂಪುಟ ಪುನಾರ್ ರಚನೆ ಬಗ್ಗೆಯೂ ಚರ್ಚಿಸಿದ್ದಾರೆ. ಕಾಲ್ತುಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ನ್ಯಾಯಾಂಗ ತನಿಖೆಯ ಸಮಯದಲ್ಲಿ ಕರ್ನಾಟಕ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪಕ್ಷವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಿರುವುದಾಗಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದರು.
RCB ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿವಾಸಿ ಭೂಮಿಕ್ ಅವರ ಮನೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇನ್ನು ಕಾಲ್ತುಳಿತ ಘಟನೆಯ ಬಗ್ಗೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದ್ದು, ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿಸಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈವರೆಗೂ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳಿಗೆ ಹತ್ತಿರದ ಬೇನಾಮಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ED ಹೇಳಿದೆ.
ಮಂಗಳೂರಿನ ಆಳ ಸಮುದ್ರದಲ್ಲಿ ಅಗ್ನಿಅವಘಡಕ್ಕೆ ತುತ್ತಾಗಿರುವ ಸಿಂಗಾಪುರ ಮೂಲದ MV WAN HAI 503 ಸರಕು ಸಾಗಾಣಿಕಾ ಹಡಗಿನಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಭಾರತದ ಸಮುದ್ರ ಪ್ರಹರಿ, ಸಚೇತ್, ಐಸಿಜಿ ಹಡಗು ಸಮರ್ಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ ಆಳ ಸಮುದ್ರದಲ್ಲಿ ಈ ಘಟನೆ ನಡೆದಿದೆ. ಹಡಗಿನಲ್ಲಿದ್ದ 18 ಜನ ಸಿಬ್ಬಂದಿಯನ್ನು ಭಾರತೀಯ ನೌಕಾ ಪಡೆ ರಕ್ಷಿಸಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement