
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ. ಇಂದು ಸಂಜೆ ದಿಢೀರ್ ಮಳೆಯಾಗಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲದೆ ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ.
ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ (Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅಂತೆಯೇ ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement