
ಹುಬ್ಬಳ್ಳಿ-ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಮಧ್ಯೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಒಂದು ದಿನದ ಮಟ್ಟಿಗೆ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಆದರೆ ಈ ಮೊದಲೇ ನಿಗದಿಯಾಗಿರುವ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಲಾಗಿದೆ.
ಮುಂದಿನ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಬರುವ ನಿರೀಕ್ಷೆ ಇದ್ದು. ಜೂನ್ 13 ಹಾಗೂ 14ಕ್ಕೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
9 ಜಿಲ್ಲೆಗಳಿಗೆ ರೆಡ್ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಒಬ್ಬರು ಕೊಚ್ಚಿಹೋಗಿರುವ ಶಂಕೆ
ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಕಳೆದ ರಾತ್ರಿ ಒಬ್ಬರು ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Advertisement