ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ-171 ವಿಮಾನ ಅಪಘಾತಕ್ಕೀಡಾಗಿದ್ದು, 242 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪ್ರಾಮಾಪಾಯದಿಂದ ಪಾರಾಗಿದ್ದಾರೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿದ್ದ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಮೇಘನಿ ನಗರದ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಜನನಿಬಿಡ, ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನದ ಅವಶೇಷಗಳು ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ್ದು, ಹಾಸ್ಟೆಲ್ ಪ್ರದೇಶದಲ್ಲಿಯೂ ಭಾರಿ ಹಾನಿ ಸಂಭವಿಸಿ ಹಲವು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರುಪಾನಿ ಸಾವನ್ನಪ್ಪಿದ್ದಾರೆ. ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ" ಎಂದು ಹೇಳಿದ್ದಾರೆ.
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ. ಬಿಡುಗಡೆ ಮಾಡುವಂತೆ ಕೋರಿ ಆರ್‌ಸಿಬಿ ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪದಾಧಿಕಾರಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಿಗೆ ತಮ್ಮ ಪಾಸ್‌ಪೋರ್ಟ್ ನ್ನು ಒಪ್ಪಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ, ಕಾಲ್ತುಳಿತ ಘಟನೆಗೆ ಸಂಬಂಧಿಸಿದ ಅರ್ಜಿಗೆ ಸಂಬಂಧಿಸಿದ ಎಲ್ಲಾ ಸಂಬಂಧಿತ ದಾಖಲೆಗಳನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಸ್ವೀಕರಿಸಿದೆ. ವಿಚಾರಣೆ ವೇಳೆ, ಕನ್ನಡದಲ್ಲಿರುವ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಯಿತು. ಎರಡು ದಿನಗಳಲ್ಲಿ ಇಂಗ್ಲಿಷ್ ಅನುವಾದವನ್ನು ಒದಗಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಪೀಠಕ್ಕೆ ತಿಳಿಸಿದ್ದಾರೆ.
ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು, ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಸಂಪುಟ ಸಭೆಯ ನಿರ್ಧಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ, ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು 90 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. ಆದರೆ ಸಮೀಕ್ಷೆಯ ವೆಚ್ಚದ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ನಿರಾಕರಿಸಿದರು. 10 ವರ್ಷಗಳ ಹಿಂದೆ ನಡೆಸಲಾದ ಸಮೀಕ್ಷೆಯಿಂದ ಹೊರಗಿಡಲಾಗಿದೆ, ಅಂಕಿ- ಅಂಶ ಸರಿಯಾಗಿಲ್ಲ ಎಂದು ಕೆಲವು ಸಮುದಾಯಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಸಮೀಕ್ಷೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ತವರು ಜಿಲ್ಲೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಲು ಮುಂದಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ. ನಗರದ ಬೆಳವಣಿಗೆಯನ್ನು ಮನಗಂಡ ಸರ್ಕಾರ ತುಮಕೂರನ್ನು ಬೆಂಗಳೂರು ಉತ್ತರ ಎಂದು ಹೆಸರಿಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ತುಮಕೂರು ನಗರದ ಸುತ್ತಲಿನ 14 ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ನಗರವನ್ನು ವಿಸ್ತರಿಸುವ ಪ್ರಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಭಾರಿ ಪ್ರವಾಹ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡು ಹಲವಾರು ಮನೆಗಳಿಗೆ ನೀರು ನುಗ್ಗಿದೆ. ನಿನ್ನೆ ರಾತ್ರಿ ಹುಬ್ಬಳ್ಳಿಯ ನೇಕಾರ್ ನಗರದ ನಿವಾಸಿಯೊಬ್ಬರು ಪ್ರವಾಹದ ಚರಂಡಿಗೆ ಜಾರಿ ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಹಲವಾರು ಮನೆಗಳಿಗೆ ನೀರು ನುಗ್ಗಿತು. ನಿವಾಸಿಗಳು ರಾತ್ರಿಯಿಡೀ ನೀರನ್ನು ಹೊರಹಾಕಬೇಕಾಯಿತು. ಅನೇಕ ಅಪಾರ್ಟ್‌ಮೆಂಟ್‌ಗಳ ನೆಲಮಾಳಿಗೆಗಳು ಸಹ ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Advertisement