
ಬಳ್ಳಾರಿ: ಕಾಂಗ್ರೆಸ್ ಶಾಸಕರು ಮತ್ತು ಸಂಸದರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಒಂದು ದಿನದ ನಂತರ, ಬಳ್ಳಾರಿ ಜಿಲ್ಲೆಯಲ್ಲಿರುವ ಪಕ್ಷದ ನಾಯಕರು ಒಗ್ಗೂಡಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮತ್ತು ಬಳ್ಳಾರಿ ಸಂಸದ ಇ. ತುಕಾರಾಂ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.
ಎಸ್ಟಿ ಕಲ್ಯಾಣ ಮಂಡಳಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ನಂತರ ಇಡಿ ತಂಡ ಕೆಲವು ದಾಖಲೆಗಳೊಂದಿಗೆ ಹಿಂತಿರುಗಿತು. ಇದಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ತುಕಾರಾಂ, ತಮ್ಮ ಮನೆಯಲ್ಲಿ ನಡೆದ ದಾಳಿ ಎಸ್ಟಿ ಕಲ್ಯಾಣ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದೆ ಎಂದು ಹೇಳಿದರು. ನಾನು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂತೋಷ್ ಲಾಡ್ ಮತ್ತು ಇತರ ಅನೇಕರು ಸೇರಿದಂತೆ ಕಾಂಗ್ರೆಸ್ ನಾಯಕರು ತಮ್ಮ ನೈತಿಕ ಬೆಂಬಲವನ್ನು ನೀಡಿದರು. ಆಪಾದಿತ ಹಗರಣಕ್ಕೂ ನಮಗೆ ಯಾವುದೇ ರೀತಿಯ ಸಂಬಂಧವಿಲ್ಲ. ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಕಲ್ಯಾಣ ಮಂಡಳಿಯ ಹಣವನ್ನು ಬಳಸಲಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ ಅದೆಲ್ಲ ಶುದ್ಧ ಸುಳ್ಳು ಎಂದರು.
ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರ ಮನೆಯಿಂದ ಒಂದೇ ಒಂದು ರೂಪಾಯಿ ಅಥವಾ ಯಾವುದೇ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ಹೇಳಿದರು. ಇಡಿ ಅಧಿಕಾರಿಗಳು ಕೆಲವು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಕೇಳಿದರು ಮತ್ತು ನಾನು ಅವುಗಳನ್ನು ಶೀಘ್ರದಲ್ಲೇ ಇಡಿ ಕಚೇರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಬಿಜೆಪಿ ಅವರ ಯಾವುದೇ ಪ್ರಯತ್ನಗಳಲ್ಲಿ ಯಶಸ್ವಿಯಾಗುವುದಿಲ್ಲ. ನಾವು ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಿದ್ದೇವೆ ಎಂದು ಅವರು ಹೇಳಿದರು.
Advertisement