ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 13,000 ಕೋಟಿ ರೂ ಅನುದಾನ ಕೊಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಯಾದಗಿರಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರೂ. 13,000 ಕೋಟಿ ಅನುದಾನ ಕೊಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಯಾದಗಿರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಆರೋಗ್ಯ ಆವಿಷ್ಕಾರ" ಯೋಜನೆಯಡಿ ₹440.63 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ಮೊತ್ತ ಖರ್ಚಾಗಿದ್ದು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ ಎಂದರು.

ಕೊಲ್ಲೂರು ಮಲ್ಲಪ್ಪ ಸ್ಮಾರಕಕ್ಕೆ ಉಚಿತ ಜಾಗ: ನಂಜುಂಡಪ್ಪ ವರದಿಯ ಆಶಯಗಳನ್ನು ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗಕ್ಕೆ ಸೂಚಿಸಲಾಗಿದೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಉಚಿತವಾಗಿ ಜಾಗ ಕೊಟ್ಟಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರಾದ ಮಲ್ಲಪ್ಪ ಸ್ಮಾರಕ ಕೂಡಲೇ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿಯ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು: ಬೆಲೆ ಏರಿಕೆಗೆ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣ. ಮೋದಿಯವರು ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿಯವರು ಬಂದ ಬಳಿಕ ಎಷ್ಟು ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಮ್ ಸಿಂಗ್ ಅವರ ಶ್ರಮ‌ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದರು.

CM Siddaramaiah
ಬೆಂಗಳೂರು ಮತ್ತು ಮೈಸೂರಿನಂತೆಯೇ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪರಿವರ್ತಿಸಿ: ಮಲ್ಲಿಕಾರ್ಜುನ ಖರ್ಗೆ

ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುತ್ತಿದ್ದೇವೆ. ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ. ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com