
ನವದೆಹಲಿ/ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈ ನಡುವಲ್ಲೇ ಇಸ್ರೇಲ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರೊಂದಿಗೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಾತುಕತೆ ನಡೆಸಿ, ರಕ್ಷಣೆಯ ಭರವಸೆ ನೀಡಿದರು.
ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿದ ಕುಮಾರಸ್ವಾಮಿಯವರು, ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಕೇಂದ್ರ ಸರಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.
ನಮ್ಮ ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು.
ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತರಾಗಿದ್ದೇವೆ ಮತ್ತು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು.
ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರಲ್ಲದೆ, ಇದಕ್ಕಾಗಿ ರಾಯಭಾರ ಕಚೇರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
Advertisement