
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜೆಪ್ಪಿನಮೊಗರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ತಡರಾತ್ರಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಸ್ಥಳೀಯ ನಾಯಕ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಮೃತರನ್ನು ಎನ್‌ಎಸ್‌ಯುಐಗೆ ಸೇರಿದ ಓಂ ಶ್ರೀ(24) ಮತ್ತು ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(23) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ.
ಅಪಘಾತದಲ್ಲಿ ವಂಶಿ ಮತ್ತು ಆಶಿಕ್ ಎಂಬ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ನಗರದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಟಾಲಿ ಮೂಲದವರು ಎಂದು ಹೇಳಲಾಗುವ ಮತ್ತೊಬ್ಬ ಪ್ರಯಾಣಿಕ ಜೆರ್ರಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೃತ ಇಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂದು ತಿಳಿದುಬಂದಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement