
ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಸುರೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾಗಡಿ ತಾಲ್ಲೂಕಿನ ಕುದೂರು ರಾಜಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದರು.
ಈ ಎರಡು ಸ್ಥಾನಗಳಿಗೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಇಬ್ಬರೂ ಅವಿರೋಧವಾಗಿ ಆಯ್ಕೆಯಾದಂತಾಗಿದೆ.
ಚುನಾವಣಾ ಪ್ರಕ್ರಿಯೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ.ಸುರೇಶ್ ಅವರು, ಬಮೂಲ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಒಮ್ಮತದಿಂದ ನನ್ನನ್ನು ಆಯ್ಕೆ ಮಾಡುವ ಮೂಲಕ ಸಹಕಾರ ಸಂಸ್ಥೆಯ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಒಕ್ಕೂಟದಲ್ಲಿ ಬದಲಾವಣೆ ಬಯಸಿದ್ದಾರೆ. ಎಲ್ಲರ ಸಹಕಾರ ಪಡೆದು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ. ಬಮುಲ್ ಅನ್ನು ಬಲಪಡಿಸಲು ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪರಿಸರ ಸ್ನೇಹಿ ಹಾಲಿನ ಸ್ಯಾಚೆಟ್‌ಗಳನ್ನು ಪರಿಚಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಏತನ್ಮಧ್ಯೆ, ಸುರೇಶ್ ಕೆ.ಎಂ.ಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement