
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಕುರಿತು ಚರ್ಚಿಸಲಾಗಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕ ಕುರಿತು ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ತಿಳಿಸಿದ್ದಾರೆ.
ಕರಡು ಮಸೂದೆಯ ಪ್ರಕಾರ, ನಕಲಿ ಸುದ್ದಿಗಳಲ್ಲಿ ತಪ್ಪು ಉಲ್ಲೇಖಗಳು ಅಥವಾ ಒಬ್ಬರ ಹೇಳಿಕೆಯ ಸುಳ್ಳು ಮತ್ತು/ಅಥವಾ ತಪ್ಪಾದ ವರದಿಗಳ ಸಂಯೋಜನೆ ಸೇರಿದೆ.
ಸತ್ಯ ಮತ್ತು/ಅಥವಾ ಸಂದರ್ಭದ ವಿರೂಪಕ್ಕೆ ಕಾರಣವಾಗುವ ಆಡಿಯೋ ಅಥವಾ ವೀಡಿಯೊ ತುಣುಕುಗಳನ್ನು ಸಂಪಾದಿಸುವುದು; ಕಾನೂನುಬದ್ಧ, ಸಂಘಟಿತ ಅಥವಾ ಅಸಂಘಟಿತ, ಅದು ಸಾಮಾಜಿಕ ಮಾಧ್ಯಮ ವಿಷಯವನ್ನು ಬಳಸಿಕೊಳ್ಳುವುದು, ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ, ಪರಿಶೀಲಿಸಿದ ಅಥವಾ ಗುಪ್ತನಾಮ, ಕಾಲ್ಪನಿಕ ಅಥವಾ ಸುಳ್ಳು ಖಾತೆ/ಪುಟದ ಹೆಸರಿನ ಮೂಲಕ ಸಂದೇಶಗಳು ಮತ್ತು/ಅಥವಾ ಮಾಹಿತಿಯನ್ನು ಕಳುಹಿಸುವುದು, ನಕಲಿ ಸುದ್ಧಿಗಳನ್ನು ಹರಡುವುದನ್ನು ಸಂಪೂರ್ಣ ನಿಷೇಧಿಸುವುದನ್ನು ಕಾನೂನು ಖಚಿತರಡಿಸುತ್ತದೆ.
ಕಾಯ್ದೆಯನ್ನು ಜಾರಿಗೆ ತರಲು ನಕಲಿ ಸುದ್ದಿ ನಿಯಂತ್ರಣ ಪ್ರಾಧಿಕಾರವನ್ನು ರಚಿಸಲಾಗುತ್ತದೆ. ಈ ಪ್ರಾಧಿಕಾರವು ಕನ್ನಡ ಮತ್ತು ಸಂಸ್ಕೃತಿ, ಮಾಹಿತಿ ಮತ್ತು ಪ್ರಸಾರ ಸಚಿವರನ್ನು ಪದನಿಮಿತ್ತ ಅಧ್ಯಕ್ಷರನ್ನಾಗಿ; ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ತಿನಿಂದ ತಲಾ ಒಬ್ಬ ಸದಸ್ಯರನ್ನು ಅಧ್ಯಕ್ಷರು ನಾಮನಿರ್ದೇಶನ ಮಾಡುತ್ತಾರೆ. ರಾಜ್ಯ ಸರ್ಕಾರದಿಂದ ನೇಮಕಗೊಳ್ಳುವ ಸಾಮಾಜಿಕ ಮಾಧ್ಯಮ ವೇದಿಕೆಗಳ ಇಬ್ಬರು ಪ್ರತಿನಿಧಿಗಳು ಮತ್ತು ಕಾರ್ಯದರ್ಶಿಯಾಗಿ ಒಬ್ಬ ಐಎಎಸ್ ಅಧಿಕಾರಿಯನ್ನು ಒಳಗೊಂಡಿರುತ್ತದೆ.
ವ್ಯಕ್ತಿ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವಲ್ಲಿ ತಪ್ಪಿತಸ್ಥರೆಂದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಸಂಪುಟ ಸಭೆಯಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ವ್ಯವಸ್ಥೆಯ ಕಾರ್ಯನಿರ್ವಹಣೆಯ ಸ್ವರೂಪವನ್ನು ಚರ್ಚಿಸಲಾಗಿದ್ದು, ಮರುಪರಿಶೀಲಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕೆಎಟಿಯ ಕಾರ್ಯನಿರ್ವಹಣೆಯ ಬಗ್ಗೆ ಚರ್ಚೆಗಳು ಮತ್ತು ಆಕ್ರೋಶಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಪುರನ್ ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲು ಚಿಂತೆ ನಡೆಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.
ಜು.17ಕ್ಕೆ ನಂದಿ ಬೆಟ್ಟದಲ್ಲಿ ಸಂಪುಟ ಸಭೆ
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜು.16 ಅಥವಾ 17 ರಂದು ನಿಗದಿಯಾಗಬಹುದು. ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಇಂದು ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಯಿತು ಎಂದು ಸಚಿವರು ತಿಳಿಸಿದರು.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ...
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ನಿರ್ಧಾರ
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲ೦ಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಹಸಿರು ನಿಶಾನೆ
ಸ್ಪೋಕ್ ಯೋಜನೆಯ ರೂ. 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟಬಸಾಪೂರ ಎಂದು ಮರುನಾಮಕರಣ ಮಾಡಲು ತೀರ್ಮಾನ
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ. ಮಂಟಪ ನಿರ್ಮಾಣ ಕಾಮಗಾರಿಯ ರೂ. 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು ರೂ.23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ
ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ಖಾಲಿ ನಿವೇಶನವನ್ನು ಶೇ 50 ರಷ್ಟುರಿಯಾಯಿತಿ ದರದಲ್ಲಿ ಮಂಜೂರು ಮಾಡಲು ನಿರ್ಧಾರ
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಬಾಗದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ ರೂ.134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
ರಾಯಚೂರು ಜಿಲ್ಲೆ ಸಿ೦ಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತು೦ಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ ರೂ.43.10 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು ರೂ.15.97 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ನಿರ್ಧಾರ
ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು ಶೇ.15ಗೆ ಹೆಚ್ಚಿಸಲು ನಿರ್ಣಯ
ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಬೆಳೆಗಾರರಿಗೆ ಪರಿಹಾರವನ್ನು ಒದಗಿಸಿಕೊಡಲು ಕೇಂದ್ರವನ್ನು ಒತ್ತಾಯಿಸಲು ಕೃಷಿ ಸಚಿವರಿಗೆ ಸೂಚನೆ ನೀಡಲಾಗಿದೆ.
Advertisement