
ನವದೆಹಲಿ: ಐಶ್ವರ್ಯ ಗೌಡ ಪ್ರಮುಖ ಆರೋಪಿಯಾಗಿರುವ ವಂಚನೆಗೆ ಸಂಬಂಧಿಸಿದ ಪಿಎಂಎಲ್ ಎ ಪ್ರಕರಣದ ತನಿಖೆಯ ಭಾಗವಾಗಿ ಸುಮಾರು 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಸೋಮವಾರ ತಿಳಿಸಿದೆ.
ಇದೇ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಅವರು ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ(ED)ಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು.
ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ 2.01 ಕೋಟಿ ರೂ. ಮೌಲ್ಯದ ಫ್ಲಾಟ್‌ಗಳು, ಕಟ್ಟಡ ಮತ್ತು ಭೂಮಿ ಸೇರಿದಂತೆ ನಗದು ಮತ್ತು 1.97 ಕೋಟಿ ರೂ. ವಾಹನ ಜಪ್ತಿ ಮಾಡಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 19 ರಂದು ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಇಡಿ ಹೇಳಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 3.98 ಕೋಟಿ ರೂ. ಎಂದು ಇಡಿ ತಿಳಿಸಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳು ಯಾರಿಗೆ ಸೇರಿವೆ ಎಂಬುದನ್ನು ಇಡಿ ಪ್ರಕಟಣೆಯಲ್ಲಿ ತಿಳಿಸಿಲ್ಲ.
Advertisement