
ಬೆಂಗಳೂರು: ಇಲ್ಲಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ನಗರದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಕಾಲೇಜು ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳನ್ನು ಒಳಗೊಂಡಂತೆ ಒಟ್ಟು 18 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರದ ತನಿಖಾ ಸಂಸ್ಥೆಯ ಬೆಂಗಳೂರು ವಲಯ ಘಟಕವು ತನಿಖೆ ನಡೆಸುತ್ತಿದ್ದು, ಶೋಧದ ಸಮಯದಲ್ಲಿ ಕೆಲವು ದಾಖಲೆಗಳು ಮತ್ತು ಕಂಪ್ಯೂಟರ್ ಹಾರ್ಡ್‌ವೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ KEA ಅಧಿಕಾರಿಗಳು ಈ ಹಿಂದೆ ಪೊಲೀಸರಿಗೆ ದೂರು ದಾಖಲಿಸಿದ್ದರು. KEA ಪಟ್ಟಿಯಂತೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಆಗುತ್ತಿಲ್ಲ. ಸೀಟು ನೀಡಲು ಲಕ್ಷಾಂತರ ರೂಪಾಯಿ ಹಣಕ್ಕೆ ಕಾಲೇಜು ಆಡಳಿತ ಮಂಡಳಿ ಬ್ಲಾಕ್ ಮಾಡುತ್ತಿವೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
Advertisement