
ಬೆಂಗಳೂರು: ಅರಮನೆ ಮೈದಾನದ ಮಾಲೀಕತ್ವದ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳುವವರೆಗೆ ಟಿಡಿಆರ್ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.
ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹಾಗೂ 10 ದಿನಗಳ ಒಳಗಾಗಿ ಟಿಡಿಆರ್ ಪ್ರಮಾಣಪತ್ರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿತ್ತು. ಇಷ್ಟು ಮೊತ್ತದ ಪರಿಹಾರ ನೀಡಿದರೆ ಸರ್ಕಾರಕ್ಕೆ ಹೊರೆ ಆಗಲಿದೆ ಎಂಬ ಕಾರಣಕ್ಕೆ ಜ.23ರಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ ರಸ್ತೆ ಅಗಲೀಕರಣ ಪ್ರಸ್ತಾಪವನ್ನೇ ಕೈಬಿಟ್ಟು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.
ಕಳೆದ ವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ನಿರ್ಣಯವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಿ ರಸ್ತೆ ಅಗಲೀಕರಣ ಪ್ರಸ್ತಾವನೆ ಕೈಬಿಟ್ಟಿದ್ದೇವೆ. ಹೀಗಾಗಿ 3400 ಕೋಟಿ ಟಿಡಿಆರ್ ಪರಿಹಾರ ನೀಡುವುದಿಲ್ಲ ಎಂದು ಸರ್ಕಾರ ಹೇಳಿತ್ತು.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, 3400 ಕೋಟಿ ರೂ. ಮೊತ್ತದ ಟಿಡಿಆರ್ ನೀಡಲು ಸಾಧ್ಯವಿಲ್ಲ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಸಾರ್ವಜನಿಕರ ಹಣವನ್ನು ಈ ರೀತಿ ಖರ್ಚು ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದರು. ಅಲ್ಲದೇ 1270 ಚ.ಮೀ. ಭೂಮಿಯನ್ನು ನಾವು ಅಂಡರ್‌ಪಾಸ್‌ಗೆ ಬಳಕೆ ಮಾಡಿದರೆ ಅದಕ್ಕೆ 49 ಕೋಟಿ ರೂ. ಟಿಡಿಆರ್ ನೀಡಬಹುದು. ಆದರೆ ನಾವು ಅರಮನೆ ಭೂಮಿಯನ್ನು ಬಳಕೆಯನ್ನೇ ಮಾಡಿಲ್ಲ. ಹೀಗಾಗಿ ಟಿಡಿಆರ್ ಸಲ್ಲಿಸುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದರು.
ಜೊತೆಗೆ, ಈ ಭೂಮಿಯನ್ನು 1994ರಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಆದರೆ 2024ರ ಮೌಲ್ಯದಂತೆ ಪರಿಹಾರ ಕೇಳಲಾಗುತ್ತಿದೆ. ಆದರೆ ನಾವು ಭೂಮಿಯನ್ನು ಬಳಕೆ ಮಾಡಿಲ್ಲ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯವಿದೆ ಎಂದು ಅವರು ಹೇಳಿದರು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ 10 ದಿನದೊಳಗೆ ಕೋರ್ಟ್‌ಗೆ ಟಿಡಿಆರ್ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಿತು.
ನ್ಯಾಯಾಲಯದ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೃಷ್ಣ ಬೈರೇಗೌಡ ಅವರು, ಆದೇಶವನ್ನು ಪ್ರಶ್ನಿಸಲಾಗಿದೆ. ಅರಮನೆ ಮೈದಾನದ ಮಾಲೀಕತ್ವದ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು. ಟಿಡಿಆರ್ ನೀಡಿದ ನಂತರ, ಅವರು ಆಸ್ತಿ ರಾಟ ಮಾಡಿದರೆ, ನಂತರ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿ ಬಂದರೆ ಏನು ಮಾಡಬೇಕು? ಹಾಗಾದಾಗ ಟಿಡಿಆರ್ ಹಿಂಪಡೆಯುವುದು ಹೇಗೆ? ಎಂದು ಪ್ರಶ್ನಿಸಿದರು.
ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಭೂಮಿ ರಾಜಮನೆತನದ ವಶದಲ್ಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಮಾಡಬೇಕೋ ಬೇಡವೋ ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ. ನಾವು ಕೂಡ ಕಾನೂನು ಹೋರಾಟ ನಡೆಸುತ್ತೇವೆ, ಅದು ಹೇಗೆ ನಡೆಯುತ್ತದೆ ಎಂಬುದನ್ನು ನೋಡೋಣ ಎಂದು ಹೇಳಿದರು.
Advertisement