ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಜಿಎಸ್‌ಟಿ ಬೆಳವಣಿಗೆ ದರ ಉತ್ತಮವಾಗಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸಿದವು. ಪ್ರತಿಪಕ್ಷಗಳ ನಾಯಕರು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಹುದ್ದೆ ಹಗ್ಗಜಗ್ಗಾಟ ಮುಂದುವರೆದಿದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದು, ಅವರ ಹೇಳಿಕೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಅದು ಅವರ ವೈಯಕ್ತಿಕ ಅಭಿಪ್ರಾಯ, ಡಿಕೆ ಶಿವಕುಮಾರ್ ಇವತ್ತು ಅಥವಾ ನಾಳೆ ಸಿಎಂ ಆಗುತ್ತಾರೆ ಎಂದು ಮೊಯ್ಲಿ ಆಗಲಿ, ಬೇರೆಯವರಾಗಲಿ ಹೇಳಿಲ್ಲ. ಮುಂದೊಂದು ದಿನ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಈಮಧ್ಯೆ, ಮೊಯ್ಲಿ ಅಥವಾ ಮತ್ಯಾರೋ ಹೇಳಿದರೆ ಯಾರೂ ಸಿಎಂ ಅಗಲ್ಲ, ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಡಿಕೆ ಶಿವಕುಮಾರ್, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದಷ್ಟೇ ಹೇಳಿದ್ದಾರೆ.
ಕಲಾವಿದರಿಗೆ ನಟ್ಟು-ಬೊಲ್ಟ್ ಟೈಟ್ ಮಾಡುತ್ತೇನೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಸಮರ್ಥಿಸಿಕೊಂಡಿದ್ದಾರೆ. ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರಮ್ಯ, ಡಿಸಿಎಂ ಸಾಹೇಬ್ರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ. ಅವರು ಹೇಳಿದ್ದು ಸರಿಯಾಗಿದೆ. ಕಲಾವಿದರಾಗಿ ನಮಗೆ ಒಂದು ಜವಾಬ್ದಾರಿ ಇದ್ದೇ ಇರುತ್ತದೆ. ಡಾ. ರಾಜ್ಕುಮಾರ್ ಅವರನ್ನು ನೋಡಿ.. ಕನ್ನಡ ಭಾಷೆಗಾಗಿ ಅವರು ಎಷ್ಟು ಹೋರಾಟ ಮಾಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ನಡುವೆ ಮೊದಲು ಇದ್ದ ಬೆಂಬಲ, ಪ್ರೋತ್ಸಾಹ ಇವತ್ತು ನನಗೆ ಕಾಣಿಸುತ್ತಿಲ್ಲ’ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಬೇಡಿಕೆ ಇದೀಗ ತಲೆನೋವು ಸೃಷ್ಟಿಸಿದೆ. ಬಾಕಿ ಇರುವ 15 ಸಾವಿರ ಕೋಟಿ ಪಾವತಿ ಮಾಡದೇ ಇದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಸಂಘದ ಪದಾಧಿಕಾರಿಗಳು ನಿರ್ಧರಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಗುತ್ತಿಗೆದಾರರ ಸಂಘದ ಪ್ರಮುಖರು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ ಸಂಘದ ಪ್ರಮುಖರು, ಬಾಕಿ ಹಣ ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಏಪ್ರಿಲ್ ತಿಂಗಳ ಅಂತ್ಯದ ಒಳಗೆ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ. ಬಾಕಿಯಿರೋ 15 ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಸಿಎಂ ಭರವಸೆ ನೀಡಿದ್ದಾರೆ'.
Advertisement