
ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರಿ ಮತ್ತು ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಬುಧವಾರ ಈ ಕುರಿತು ಪೊಲೀಸ್ ಇಲಾಖೆಯಿಂದ ಆಂತರಿಕ ವರದಿ ಕೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆ ನಡೆಯುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಪ್ರಕರಣದ ತನಿಖೆ ನಡೆಸುತ್ತಿದೆ. ಅವರು ಖಚಿತ ಮಾಹಿತಿ ನೀಡುವವರೆಗೆ, ನಾನು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ" ಎಂದರು.
"ನಾನು ಈ ವಿಷಯವನ್ನು ಪೊಲೀಸ್ ಮುಖ್ಯಸ್ಥರೊಂದಿಗೆ ಚರ್ಚಿಸಿದ್ದೇನೆ. ಇಲಾಖೆಯು ಪರಿಶೀಲಿಸುವಂತೆ ಸೂಚಿಸಿದೆ. ಅವರು ಖಂಡಿತವಾಗಿಯೂ ಕೆಲವು ಮಾಹಿತಿಯನ್ನು ಪಡೆಯುತ್ತಾರೆ" ಎಂದರು.
ಪೊಲೀಸ್ ಇಲಾಖೆಯಲ್ಲಿ ಡಿಜಿಪಿಯಾಗಿ ಕೆಲಸ ಮಾಡುತ್ತಿರುವ ರಾಮಚಂದ್ರರಾವ್ ಅವರ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಡಿಅರ್ಐ ನವರೇ ತನಿಖೆಯನ್ನು ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ. ಪ್ರಕರಣ ತನಿಖಾ ಹಂತದಲ್ಲಿದೆ, ಹಾಗಾಗಿ ಏನನ್ನೂ ಹೇಳಲಾಗದು ಎಂದರು.
ರನ್ಯಾ ರಾವ್ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು ಎಂದರು.
ರನ್ಯಾ ರಾವ್ ಅವರನ್ನು ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪದ ಡಿಆರ್ ಐ ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದಾರೆ. ಅವರ ಬಳಿ ಸುಮಾರು 15 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ.
Advertisement