
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ದೂರುದಾರ ಮತ್ತು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಬುಧವಾರ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನಗಳ ಹಂಚಿಕೆ ಬಗ್ಗೆ ಲೋಕಾಯುಕ್ತ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಅವರ ವಿರುದ್ಧದ ಆರೋಪಗಳನ್ನು ಬೆಂಬಲಿಸುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರೋಪಿಗಳ ಪರವಾಗಿ ವರದಿ ಪಡೆಯಲು ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಯ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಮುಡಾದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಯ ಅಗತ್ಯವನ್ನು ಪುನರುಚ್ಚರಿಸಿದ ಸ್ನೇಹಮಯಿ, 14 ನಿವೇಶನಗಳ ಹಂಚಿಕೆಯಲ್ಲಿ ಮಾತ್ರವಲ್ಲದೆ, ಸಾವಿರಾರು ಇತರ ನಿವೇಶನಗಳ ಹಂಚಿಕೆಯಲ್ಲಿನ ಗಂಭೀರ ಲೋಪಗಳ ಬಗ್ಗೆಯೂ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದೇನೆ. ಸಿಬಿಐಗೆ ಈ ಪ್ರಕರಣವನ್ನು ಯಾಕೆ ನೀಡಬೇಕು ಎಂದು ಕೋರ್ಟ್ಗೆ ನಮ್ಮ ವಕೀಲರು ಮನವರಿಕೆ ಮಾಡಿಕೊಡಲಿದ್ದಾರೆ. ಮೇಲ್ನೋಟಕ್ಕೆ ಲೋಕಾಯುಕ್ತ ವರದಿಯಲ್ಲಿ ಅನುಮಾನು ಸಾಕಷ್ಟು ಇವೆ. ಈ ಕುರಿತು ನ್ಯಾಯಾಲಯಕ್ಕೆ ತಿಳಿಸಲು ಮೇಲ್ಮನವಿ ಸಲ್ಲಿಸಲಾಗಿದೆ ಎಂದರು.
ಕೇಂದ್ರ ತನಿಖಾ ಸಂಸ್ಥೆಯ ಮುಡಾ ಅಕ್ರಮಗಳನ್ನು ಮತ್ತಷ್ಟು ಬಹಿರಂಗಪಡಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಲಿಸಿತ್ತು. ಇದೀಗ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
Advertisement