
ಬೆಂಗಳೂರು: 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಡಿಆರ್ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಡಿಆರ್ಐ ಅಧಿಕಾರಿಗಳು ಆರೋಪಿ ನಟಿಯನ್ನು ಹೆಚ್ಚಿನ ವಿಚಾರಣೆಗಾಗಿ ತನ್ನ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ತೀರ್ಪು ಕಾಯ್ದಿರಿಸಿದ್ದರು.
ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಅವರು, ನಟಿಯನ್ನು ಮಾರ್ಚ್ 9 ರಿಂದ ಮಾರ್ಚ್ 11ರ ವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.
ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ. ಪ್ರತಿ ಪ್ರವಾಸದಲ್ಲೂ ಅವರು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ.
Advertisement