
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ ಮೇಲಿನ ಹಲ್ಲೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಈ ವಿಡಿಯೋದಲ್ಲಿ ಉದ್ರಿಕ್ತ ಗುಂಪು ಮಹಿಳೆಗೆ ಕಪಾಳ ಮೋಕ್ಷ ಮಾಡುವುದನ್ನು ಕಾಣಬಹುದಾಗಿದೆ. ಬಳಿಕ ಮರಕ್ಕೆ ಕಟ್ಟಿ ಹಾಕಿ ಮತ್ತೆ ಹಲ್ಲೆ ನಡೆಸಿದ್ದಾರೆ. ಪಕ್ಕದಲ್ಲಿದ್ದವರು ಯಾರೂ ತಡೆಯಲು ಮುಂದಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಕೆ ವಿಜಯನಗರ ಜಿಲ್ಲೆಯ ನಿವಾಸಿಯಾಗಿದ್ದು,ಮೀನು ಕಳ್ಳತನ ಮಾಡುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಕೆಯ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಲಕ್ಷ್ಮಿ ಬಾಯಿ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಕೆಯ ಜೊತೆಗೆ ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ತಿಳಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ವೀಡಿಯೊಗಳನ್ನು ವಿಶ್ಲೇಷಿಸುತ್ತಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ, ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಕಾನೂನು ಮತ್ತು ನೈತಿಕವಾಗಿ ಇಂತಹ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಮಹಿಳೆ ಕಳ್ಳತನ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತ ತನಿಖೆ ನಡೆಸಲಾಗುತ್ತಿದೆ. ಆದರೆ ಸಾರ್ವಜನಿಕವಾಗಿ ಹಲ್ಲೆ ಮಾಡುವುದು ಅಮಾನವೀಯವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಸೂಚಿಸಲಾಗಿದ್ದು, ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ತಿಳಿಸಿದ್ದಾರೆ.
Advertisement