
ಬೆಂಗಳೂರು: ರಾಜ್ಯದಲ್ಲಿನ ಹನಿಟ್ರ್ಯಾಪ್ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಂತಹ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಮ್ಮ ಸದನಕ್ಕೆ ದೇಶದಲ್ಲಿ ಅತ್ಯುನ್ನತ ಗೌರವವಿದೆ. ನಮ್ಮ ಸದನ ಹಾಗೂ ಸದಸ್ಯರ ಘನತೆ ಕಾಪಾಡಲು, ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕಾಗಿದೆ. ಇದೊಂದು ಗಂಭೀರ ವಿಚಾರವಾಗಿದ್ದು, ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದು ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು.
ರಾಜ್ಯದಲ್ಲಿ 48 ಜನರನ್ನು ಹನಿಟ್ರ್ಯಾಪ್ ಮಾಡಲಾಗಿದ್ದು, ಅವರ ಅಶ್ಲೀಲ ವೀಡಿಯೊ ಮಾಡಲಾಗಿದೆ ಎಂಬುದು ತಿಳಿದುಬಂದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜಕೀಯ ವಿರೋಧಿಗಳನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಅವರ ಜೀವನ ಹಾಳು ಮಾಡುವ ಪ್ರವೃತ್ತಿ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದರು.
ನೀತಿ ಮತ್ತು ಸಿದ್ಧಾಂತಗಳ ಮೇಲೆ ವಿರೋಧಿಗಳನ್ನು ಸೋಲಿಸಲು ಸಾಧ್ಯವಾಗದವರು ತಮ್ಮ ರಾಜಕೀಯ ಗುರಿಗಳನ್ನು ಸಾಧಿಸಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ತಮ್ಮ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕ ಮುನಿರತ್ನ ಒತ್ತಾಯಿಸಿದರು.
Advertisement