
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(97) ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು.
ಐಪಿಎಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಾಲ್ಕಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆಯಾಗಿರುವ ಬಿ.ಎನ್.ಗರುಡಾಚಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರು ಮಹಾನಗರ ಡಿಸಿಪಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
Advertisement