
ಬೆಂಗಳೂರು: ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತ ಬಾಲಕನನ್ನು ಇಮಾನ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಇಮಾನ್ ಮತ್ತು ಆತನ ತಂದೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಮಧ್ಯಾಹ್ನ 12.30 ರ ಸುಮಾರಿಗೆ ಥಣಿಸಂದ್ರ ಬಳಿ ಅತಿ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಟ್ರಕ್ ಆತನ ಮೇಲೆ ಹರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಚಾಲಕನ ವೈದ್ಯಕೀಯ ಪರೀಕ್ಷೆಯಲ್ಲಿ ಘಟನೆ ನಡೆದ ಸಮಯದಲ್ಲಿ ಆತ ಮದ್ಯ ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ ಎಂದು ಅವರು ಹೇಳಿದರು.
ಅಪಘಾತದ ನಂತರ, ವಾಹನದ ಚಾಲಕ ಪ್ರಜ್ಞೆ ಕಳೆದುಕೊಂಡಿದ್ದಾನೆ. ಅಪಘಾತ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು, ಚಾಲಕನ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಕ್ ಟೈರ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಆರೋಪಿ ಚಾಲಕನನ್ನು ಬಂಧಿಸಲಾಗಿದೆ' ಎಂದು ಉಪ ಪೊಲೀಸ್ ಆಯುಕ್ತರಾದ (ಸಂಚಾರ ಉತ್ತರ) ಗೌರಿ ಡಿಆರ್ ತಿಳಿಸಿದ್ದಾರೆ.
Advertisement