
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಏಪ್ರಿಲ್ 4 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, 5 ರಂದು ಎಲ್ಲಾ ಮಂಡಲಗಳಲ್ಲಿಯೂ ಬೆಲೆ ಏರಿಕೆ ಧೋರಣೆ ಖಂಡಿಸಿ ಪ್ರತಿಭಟನೆ ಮಾಡಲಾಗುವುದು, ರಾಜ್ಯ ಸರ್ಕಾರ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರು, ಪೆಟ್ರೋಲ್, ಹಾಲಿನ ದರವನ್ನು ಮೂರು ಬಾರಿ ಜಾಸ್ತಿ ಮಾಡಿದ್ದಾರೆ. ಹಾಲಿನ ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದ್ದು, ಬೆಲೆ ಏರಿಕೆ ವಿರುದ್ಧ ಜನಾಂದೋಲನ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇ.4 ರಷ್ಟು ಮೀಸಲಾತಿ ವಿರೋಧಿಸಿ ಏಪ್ರಿಲ್ 10 ರ ನಂತರ ರಾಜ್ಯಾದ್ಯಂತ ಜಾಗೃತಿ ಆಂದೋಲನ ಆರಂಭಿಸುವುದಾಗಿ ಹೇಳಿದರು.
ಸ್ಪೀಕರ್ ಅವರು ನಮ್ಮ ಪಕ್ಷದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಸರಿಯಲ್ಲ, ಏಪ್ರಿಲ್ 2 ರಂದು ಬೆಳಗ್ಗೆ ವಿಧಾನಸೌಧ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ನೆಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತೇವೆ. ಬಳಿಕ ಸ್ಪೀಕರ್ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಸ್ಪೀಕರ್ ಅವರ ತೀರ್ಮಾನವು ಮತದಾರರಿಗೆ ಮಾಡಿದ ಅವಮಾನವಾಗಿದ್ದು 18 ಶಾಸಕರ ಅಮಾನತನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು ಕಮಿಟಿ ಮೀಟಿಂಗ್‍ಗಳಿಗೆ ಹಾಜರಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.
Advertisement