ರಾಜ್ಯದ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸೋಮವಾರ ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ನಿರ್ವಹಣೆಗೆ ಹಣಕಾಸು ಕೊರತೆಯಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್ ಕೊರೆದು ವೆಚ್ಚ ಮಾಡಬಾರದು. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಮಳೆ ಹೆಚ್ಚಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ಕಡಿಮೆ ಮಳೆ ದಾಖಲಾಗಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮಳೆಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ.

ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ. ರಾಜ್ಯದ ಯಾವುದೇ ಒಂದು ಹಳ್ಳಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆಯನ್ನು ಈಗಲೇ ಮಾಡಬೇಕೆಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com