
ಬೆಂಗಳೂರು: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ರಜಾ ಪೀಠದ ಮುಂದೆ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ.
ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ಸೋನು ನಿಗಮ ವಿರುದ್ಧ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ರಾತ್ರಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಸೆಕ್ಷನ್ 352(1), 352(2), ಮತ್ತು 353 ರ ಅಡಿಯಲ್ಲಿ ಸೋನು ನಿಗಮ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
Advertisement