ನೀರಾವರಿ ಯೋಜನೆಗಳಿಗೆ ಸಿಗದ ಅನುದಾನ: ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ

ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ, ರಾಜ್ಯದ ನೀರಾವರಿ ಯೋಜನೆಗಳು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿವೆ.
ತುಂಗಾ ಭದ್ರಾ ಜಲಾಶಯ
ತುಂಗಾ ಭದ್ರಾ ಜಲಾಶಯ
Updated on

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.

2024–25 ಮತ್ತು 2025–26 ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ರಾಜ್ಯ ನೀತಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌.ಪಾಟೀಲ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಜಲಸಂಪನ್ಮೂಲ, ಆರ್‌ಡಿಪಿಆರ್, ಪಿಡಬ್ಲ್ಯೂಡಿ, ವಾಣಿಜ್ಯ ಮತ್ತು ಕೈಗಾರಿಕೆಗಳು, ನಗರಾಭಿವೃದ್ಧಿ ಮತ್ತು ಸಣ್ಣ ನೀರಾವರಿ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಅನುದಾನ ಹಂಚಿಕೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ ಗುಪ್ತ ಮಾತನಾಡಿ, ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ, ರಾಜ್ಯದ ನೀರಾವರಿ ಯೋಜನೆಗಳು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿವೆ ಎಂದರು.

ತುಂಗಾ ಭದ್ರಾ ಜಲಾಶಯ
ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದರೂ ಯೋಜನೆಗೆ ಅಗತ್ಯವಿರುವ ರೂ.5,600 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ಈವರೆಗೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ಕೃಷ್ಣಾ ಮತ್ತು ತುಂಗಭದ್ರಾ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆಯ ತೆಲಂಗಾಣ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಆದರೆ, ಆಂಧ್ರಪ್ರದೇಶ ಸರ್ಕಾರ ನಕರಾತ್ಮಕ ಧೋರಣೆ ತಾಳಿದೆ. ಹೀಗಾಗಿ ನೀರಾವರಿ ಯೋಜನೆ ವಿಳಂಬವಾಗಿದೆ. ಕೇಂದ್ರ ಜಲಸಂಪನ್ಮೂಲ ಸಚಿವರು ಸಭೆ ಕರೆದರೂ ಆಂಧ್ರಪ್ರದೇಶದಿಂದ ಯಾರೂ ಭಾಗವಹಿಸುತ್ತಿಲ್ಲ. ತಮಿಳುನಾಡು ಕೂಡಾ ಕರ್ನಾಟಕದ ಯೋಜನೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಿ, ಆಂಧ್ರ ಮತ್ತು ತಮಿಳುನಾಡು ಸರ್ಕಾರಗಳು ರಾಜ್ಯದ ಯೋಜನೆಗಳಿಗೆ ಒಪ್ಪಿಗೆ ಸೂಚಿಸುವಂತೆ ಮಾಡಬೇಕು ಎಂದು ತಿಳಿಸಿದರು.

ರಾಜ್ಯದ ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಆಗುತ್ತಿಲ್ಲ. ಕೇಂದ್ರ ಭೂಸಾರಿಗೆ ಮತ್ತು ರಸ್ತೆ ಅಭಿವೃದ್ಧಿ ಇಲಾಖೆಯೂ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸಲು ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com