ವಿಪತ್ತು ನಿರ್ವಹಣೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಯಡಿಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರು ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯ ಆಡಳಿತಗಾರರ ಕಛೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ವಿಪತ್ತು ನಿರ್ವಹಣೆಯಡಿಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಬೇಕು ಮತ್ತು ಆ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಕಾಲಕಾಲಕ್ಕೆ ಪರಿಶೀಲನಾ ಸಭೆಗಳನ್ನು ನಡೆಸುವಂತೆ ಯೋಜನಾ ಇಲಾಖೆಯ ವಿಶೇಷ ಆಯುಕ್ತರಿಗೆ ಸೂಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 860 ಕಿ.ಮೀ ಉದ್ದದ ನೀರುಗಾಲುವೆ ಒಳಗೊಂಡಿದ್ದು, ಈ ಪೈಕಿ 173 ಕಿ.ಮೀ ಉದ್ದದ ಕಚ್ಚಾ ಡ್ರೈನ್‌ಗೆ ಆರ್.ಸಿ.ಸಿ ಗೋಡೆ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ತ್ವರಿತವಾಗಿ ಪಕ್ಕಾ ಡ್ರೈನ್ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಗುರುತಿಸಿರುವ 209 ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದಂತೆ, ಶಾಶ್ವತ ಪರಿಹಾರ ಸಿಕ್ಕಿರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ವಲಯ ಆಯುಕ್ತರು ಪ್ರಮಾಣಿಕರಿಸಿ ವರದಿ ನೀಡಬೇಕು. ಸಮಸ್ಯೆ ಬಗೆಹರಿಸಬೇಕಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪಂಪ್‌ಗಳ ವ್ಯವಸ್ಥೆ ಮಾಡುವುದರ ಜೊತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಮಳೆ ಮತ್ತು ಬಲವಾದ ಗಾಳಿಯಿಂದಾಗಿ, ನಗರದಲ್ಲಿ ಮರಗಳು ಮತ್ತು ಕೊಂಬೆಗಳು ಬೇರುಸಹಿತ ಉರುಳುತ್ತವೆ, ಇದರಿಂದಾಗಿ ಸಂಚಾರ ದಟ್ಟಣೆ ಮತ್ತು ನಾಗರೀಕರಿಗೆ ಅಪಾಯಗಳು ಎದುರಾಗುತ್ತವೆ. ಹೀಗಾಗಿ ಮಳೆ, ಗಾಳಿ ನೆಲಕ್ಕುರುಳ ಸಾಧ್ಯತೆ ಇರುವ ಮರಗಳನ್ನು ಗುರುತಿಸಿ ಒಣಗಿದ ರೆಂಬೆಗಳನ್ನು ಕತ್ತರಿಸುವುದು ಅಥವಾ ಮರಗಳನ್ನು ತೆರವುಗೊಳಿಸುವ ತಂಡಗಳನ್ನು ಸಕ್ರಿಯಗೊಳಿಸಬೇಕು.ಹೆಚ್ಚಿನ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಬೀಳುವ ಮರಗಳು ಮತ್ತು ಕೊಂಬೆಗಳನ್ನು ತಕ್ಷಣ ತೆರವುಗೊಳಿಸಬೇಕು,
ನಗರದಲ್ಲಿ ಗುಂಡಿಗಳನ್ನು ಮುಚ್ಚಲು ಎಲ್ಲಾ ವಲಯಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆರ್ಟಿರಿಯಲ್/ ಸಬ್ ಆರ್ಟಿರಿಯಲ್ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಸಾಧ್ಯವಾದಷ್ಟು ಬೇಗ ಮುಚ್ಚಬೇಕು. ಗುಂಡಿಗಳನ್ನು ಮುಚ್ಚಿದ ನಂತರ, ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.